ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವೆಡೆಗಳಲ್ಲಿ ಮಾಅತ್ರ ನಿನ್ನೆ ಗುಡುಗು ಸಹಿತ ಮಳೆಯಾಗಿತ್ತು. ಇನ್ನು ಕೆಲವೆಡೆಗಳಲ್ಲಿ ಬಿಸಿಲ ಝಳ, ತಾಪಮಾನ ಹೆಚ್ಚಳದಿಂದಾಗಿ ಜನರು ಹೈರಾಣಾಗುವ ಸ್ಥಿತಿ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಉಷ್ಣ ಅಲೆ ಆರಂಭವಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ.
ಉಷ್ಣ ಅಲೆ ಹಾಗೂ ಹೀಟ್ ಸ್ಟ್ರೋಕ್ ನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

