ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಈ ಎರಡು ಮಹಾನಗರಗಳ ನಡುವೆ ಅತ್ಯಾಧುನಿಕ ಸೌಲಭ್ಯಗಳುಳ್ಳ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಅನುಮೋದನೆ ದೊರೆತಿದೆ.
ಈ ಹೊಸ ರೈಲು ಕೆಎಸ್‌ಆರ್ ಬೆಂಗಳೂರು (KSR Bengaluru) ನಿಲ್ದಾಣದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ವರೆಗೆ ಸಂಚರಿಸಲಿದೆ.ಈ ಸ್ಲೀಪರ್ ರೈಲು ಸಂಚಾರದಿಂದ ಉಭಯ ನಗರಗಳ ನಡುವಿನ ಪ್ರಯಾಣದ ಸಮಯ ಗಣನೀಯವಾಗಿ ಉಳಿತಾಯವಾಗಲಿದೆ.
ಸಂಸದರ ಪ್ರಯತ್ನ: ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರ ನಿರಂತರ ಪ್ರಯತ್ನ ಮತ್ತು ಮನವಿಯ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವಾಲಯವು ಈ ಯೋಜನೆಗೆ ಹಸಿರು ನಿಶಾನೆ ತೋರಿಸಿದೆ.
ಆರಾಮದಾಯಕ ಸೇವೆ: ವಂದೇ ಭಾರತ್ ಸ್ಲೀಪರ್ ರೈಲುಗಳು ರಾತ್ರಿ ಪ್ರಯಾಣಕ್ಕೆ ಹೇಳಿಮಾಡಿಸಿದಂತಿದ್ದು, ಪ್ರಯಾಣಿಕರಿಗೆ ವಿಶ್ವದರ್ಜೆಯ ಸೌಕರ್ಯ ಮತ್ತು ಸುರಕ್ಷತೆಯನ್ನು ಒದಗಿಸಲಿವೆ.ಈ ರೈಲು ಸೇವೆಯು ವಾಣಿಜ್ಯ ಮತ್ತು ಪ್ರವಾಸೋದ್ಯಮ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಐಟಿ ಉದ್ಯೋಗಿಗಳು ಮತ್ತು ವ್ಯಾಪಾರಸ್ಥರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ.

