ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲೆ ಮಹತ್ವದ ವಿದ್ಯಮಾನಗಳು ನಡೆಯುತ್ತಿವೆ. ಉಪಚುನಾವಣೆ ವೇಳೆ ಕಾಂಗ್ರೆಸ್ ಆಂತರಿಕ ಕಚ್ಚಾಟ ದಾವಣಗೆರೆ ದಕ್ಷಿಣ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಬಗ್ಗೆ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ.
ದಾವಣಗೆರೆ ಚುನಾವಣೆ ಪ್ರಚಾರದಲ್ಲಿ ನಡೆದ ಘಟನೆಗಳು, ನಂತರದ ಬೆಳವಣಿಗೆ, ಆಂತರಿಕ ಕಚ್ಚಾಟ, ಅಸಮಾಧಾನಗಳ ಕುರಿತು ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯ ಹೈಕಮಾಂಡ್ ಕೈ ಸೇರಿದ್ದು, ಇದರ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ದಾವಣಗೆರೆ ಚುನಾವಣಾ ಪ್ರಚಹರದ ವೇಳೆ ಉಂಟಾದ ಅಸಮಾಧಾನಗಳಿಂದಾಗಿ ಹೈಕಮಾಂಡ್ ರಾಜೀನಾಮೆಗೆ ಸೂಚಿಸುವ ಸಾದ್ಯತೆ ಬೆನ್ನಲ್ಲೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್ಸಿ ನಜೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ ಎಂಬ ಮಾತು ಕೇಳಿಬರುತ್ತಿದೆ.
ಈ ಎಲ್ಲಾ ಬೆಳವಣಿಗೆಗಳು ಸಂಪುಟ ಪುನಾರಚನೆ ವೇಳೆ ಸಚಿವ ಜಮೀರ್ ಅಹ್ಮದ್ ತಲೆದಂಡವಾಗುವ ಸಾಧ್ಯತೆ ಇರಬಹುದು ಎಂದು ಹೇಳಲಾಗುತ್ತಿದೆ. ಒಟ್ಟಾರೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಸಂಚಲನ ಸೃಷ್ಟಿಸಿದೆ.

