ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ. ಘಟನೆ ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದು, ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ಸಿಇಟಿ ಪರೀಕ್ಷೆಯ ಮೊದಲ ದಿನ ಬೆಂಗಳೂರಿನ ಮಡಿವಾಳ ಕಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು. ಈ ಘಟನೆ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿಯೂ ಇಂತದ್ದೇ ಘಟನೆ ಬೆಳಕಿಗೆ ಬಂದಿತ್ತು. ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮವನ್ನು ಬ್ರಾಹ್ಮಣ ಸಮುದಾಯ ತೀವ್ರವಾಗಿ ಖಂಡಿಸಿದೆ. ಇದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಕಿಡಿಕಾರಿದೆ. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದೆ.
ಇದೇ ವಿಚಾರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಲಾಗಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಿದೆ.
ರಾಜ್ಯದಲ್ಲಿ ಜನಿವಾರದ ಜಟಾಪಟಿ ತೀವ್ರವಾಗಿದ್ದು, ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂಬುದಾಗಿ ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.

