ಶಿವಮೊಗ್ಗ: ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಮಂಜಿನಕಾನು ಗ್ರಾಮದ ನಿವಾಸಿ ಮಂಜಪ್ಪ ನಡುಗಿನಮನೆ ಅವರು ಮಂಗನ ಕಾಯಿಲೆಯಿಂದ(KFD) ಮೃತಪಟ್ಟ ಸುದ್ದಿ ತಿಳಿದ ಸಚಿವ ಮಧು ಬಂಗಾರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.
ಮೃತ ಮಂಜಪ್ಪನವರ ಪತ್ನಿ ಪಾರ್ವತಿ ಅವರು ಕೂಡ ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ಅತ್ಯುತ್ತಮ ದರ್ಜೆಯ ವೈದ್ಯಕೀಯ ಸೇವೆ ಒದಗಿಸುವಂತೆ ದೂರವಾಣಿ ಮೂಲಕ ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೈಗೊಂಡ ಪ್ರಮುಖ ಕ್ರಮಗಳು:
ಪೀಡಿತ ಗ್ರಾಮಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯನ್ನು ಯುದ್ಧೋಪಾದಿಯಲ್ಲಿ ಚುರುಕುಗೊಳಿಸಲು ಸೂಚಿಸಲಾಗಿದೆ.
ಕಾಡಿಗೆ ಹೋಗುವ ರೈತರು ಮತ್ತು ಕಾರ್ಮಿಕರಿಗೆ ರಕ್ಷಣೆ ನೀಡುವ ‘ಡಿಎಂಪಿ’ ತೈಲವನ್ನು ತಕ್ಷಣವೇ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಗ್ರಾ.ಪಂ ಮಟ್ಟದಲ್ಲಿ ಕಾಯಿಲೆಯ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕರ ಆರೋಗ್ಯ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

