ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಿಇಟಿ ಪರೀಕ್ಷೆ ವೇಳೆ ಕೆಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ ನಡೆದಿತ್ತು. ಜನಿವಾರ ತೆಗೆಸಿದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳು, ಪೋಷಕರು ಒಪ್ಪಿದರೆ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಕೊಡಲಾಗುವುದು ಎಂದು ತಿಳಿಸಿದ್ದಾರೆ.
ಸಿಇಟಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ್ದರು. ಬೆಂಗಳೂರಿನ ಮಡಿವಾಳ ಬಳಿಯ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿತ್ತು. ಇನ್ನು ಚಿಕ್ಕಬಳ್ಳಾಪುರ ಪರೀಕ್ಷಾ ಕೇಂದ್ರದಲ್ಲಿ ಓರ್ವ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಾಕಾಶ ನಿರಾಕರಿಸಲಾಗಿತ್ತು. ಇದರಿಂದಾಗಿ ಆ ವಿದ್ಯಾರ್ಥಿನಿ ಭೌತಶಾಸ್ತ್ರ ಪರೀಕ್ಷೆ ಬರೆದಿರಲಿಲ್ಲ. ಹಾಗಾಗಿ ಈ ಎಲ್ಲಾ ವಿದ್ಯಾರ್ಥಿಗಳಿಗೆ ಸಿಇಟಿ ಮರು ಪರೀಕ್ಷೆಗೆ ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಒಪ್ಪಿದ್ದಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ್ದ ಕ್ರಮಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಖಂಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಾಲೇಜಿನ ಮಾನ್ಯತೆ ರದ್ದು ಮಾಡುವಂತೆ ಹಾಗೂ 25 ಲಕ್ಷ ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳಿಗೆ ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡ ಬಗ್ಗೆ ವರದಿ ನೀಡುವಂತೆ ಸೂಚಿಸಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಕೃಪಾನಿಧಿ ಕಾಲೇಜಿನ ಪರೀಕ್ಷಾ ಕೇಂದ್ರದ ಮೂವರು ಸಿಬ್ಬಂದಿಗಳನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸಿದ್ದಕ್ಕೆ ಹಾಗೂ ವಿದ್ಯಾರ್ಥಿಗಳು ವಿಚಿಲಿತರಾಗುವಂತೆ ಗೊಂದಲ ಮಾಡಿದ್ದಕ್ಕೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನಿಡುವಂತೆ ಪೋಷಕರು, ವಿದ್ಯಾರ್ಥಿಗಳು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅಂತಹ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡಲು ನಿರ್ಧರಿಸಿದೆ.

