ಬೆಂಗಳೂರು: ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಮೇ 5ರಂದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ರಸ್ತೆ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಜನಸಂದಣಿ ಇಲ್ಲದಿರುವುದನ್ನು ಗಮನಿಸಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆತನ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಟನ್ ಪೇಟೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದ್ವಿಚಕ್ರವಾಹನದ ನಂಬರ್ ಪ್ಲೇಟ್ ಆಧಾರದ ಮೇಲೆ ಆರೋಪಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

