ಶಿವಮೊಗ್ಗ: ಸಿಎಂ ಸಿದ್ಧರಾಮಯ್ಯ ಅವರು ಜೂನ್ 1 ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ, ಜನಪರ ಯೋಜನೆಗಳ ಉದ್ಘಾಟನೆ, ವಿವಿಧ ಇಲಾಖೆಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಈಗಾಗಲೇ ನಿರ್ಮಾಣಗೊಂಡಿರುವ ನೂತನ ಕಟ್ಟಡಗಳ ಲೋಕಾರ್ಪಣೆ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುವರು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಕಳೆದ ಬಜೆಟ್ ಅಧಿವೇಶನದಲ್ಲಿ ಘೋಷಿಸಿದಂತೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಿಕ ಬದಲಾವಣೆಯ ಪ್ರತಿಬಿಂಬವಾಗಿ ಆರಂಭಿಸಲು ಉದ್ದೇಶಿಸಲಾಗಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಉದ್ಘಾಟನೆಗೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಕಾರ್ಯಕ್ರಮವೂ ಇದೇ ಭವ್ಯ ವೇದಿಕೆಯಲ್ಲಿ ನಡೆಯಲಿದೆ ಎಂದರು.
ಕಂದಾಯ ಇಲಾಖೆಯಲ್ಲಿ ಬಹುವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ದಾಖಲಾತಿಗಳನ್ನು ಅತ್ಯಲ್ಪ ಅವಧಿಯಲ್ಲಿ ಸುಧಾರಿಸಲಾಗಿದ್ದು ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ, ಸಾಮಾಜಿಕ ಭದ್ರತಾ ಸೌಲಭ್ಯಗಳು ಸೇರಿ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ವಿಕಲಚೇತನರಿಗೆ ಸೌಲತ್ತುಗಳು, ಶ್ರಮಿಕ ಕಾರ್ಮಿಕರಿಗೆ ಸೌಲಭ್ಯಗಳು, ಕೃಷಿ ಮತ್ತು ತೋಟಗಾರಿಕೆ ಯಂತ್ರೋಪಕರಣಗಳು, ಸಹಾಯಧನ ಆಧಾರಿತ ಸಾಲ-ಸೌಲಭ್ಯಗಳು, ಅಲ್ಲದೇ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನದಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಮುಖ್ಯಮಂತ್ರಿಗಳು ವಿತರಿಸುವರು ಎಂದರು.
ಇತರೆ ಇಲಾಖೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೋಟ್ಯಂತರ ರೂ. ವೆಚ್ಚದ ಹಲವು ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 1 ರಂದು ನಡೆಯುವ ಕಾರ್ಯಕ್ರಮದಲ್ಲಿ ನೆರವೇರಿಸಿಕೊಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸೇರಿದಂತೆ ಸಚಿವ ಸಂಪುಟದ ಬಹುತೇಕ ಎಲ್ಲಾ ಮಂತ್ರಿಗಳು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಆಗಮಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸೇರಿದಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಿಂದ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಆಗಮಿಸುವ ಸಾರ್ವಜನಿಕರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಒದಗಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಉಸ್ತುವಾರಿಯ ಹೊಣೆಗಾರಿಕೆ ನೀಡಲಾಗುವುದು, ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಸಹಕರಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

