ನಿನ್ನೆ ( ಮೇ 18 ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 5 ವಿಕೆಟ್ಗಳ ಗೆಲುವನ್ನು ದಾಖಲಿಸುವ ಮೂಲಕ ಪ್ಲೇಆಫ್ಗೆ ಪ್ರವೇಶ ಪಡೆದುಕೊಂಡಿತು. ಜತೆಗೆ ಗುಜರಾತ್ ಟೈಟನ್ಸ್ ಸಹ ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿತು.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕಾರ್ತಿಕ್ ಶರ್ಮಾ ಹಾಗೂ ಡಿವಾಲ್ಡ್ ಬ್ರೆವಿಸ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 181 ರನ್ಗಳ ಸವಾಲಿನ ಗುರಿಯನ್ನು ನೀಡಿತ್ತು. ಚೇಸಿಂಗ್ ಕಠಿಣವಾದ ಚೆಪಾಕ್ ಪಿಚ್ನಲ್ಲಿ ಚೆನ್ನೈ ನೀಡಿದ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೆನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಬಾರಿಸಿತು.
ಚೆನ್ನೈ ಸೂಪರ್ ಕಿಂಗ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 13 ಎಸೆತಗಳಲ್ಲಿ 27 ರನ್ ಗಳಿಸಿದರೆ, ರುತುರಾಜ್ ಗಾಯಕ್ವಾಡ್ 21 ಎಸೆತಗಳಲ್ಲಿ 15 ರನ್ ಗಳಿಸಿದರು. ಇನ್ನುಳಿದಂತೆ ಉರ್ವಿಲ್ ಪಟೇಲ್ 13, ಕಾರ್ತಿಕ್ ಶರ್ಮಾ 19 ಎಸೆತಗಳಲ್ಲಿ 32 ರನ್, ಡಿವಾಲ್ಡ್ ಬ್ರೆವಿಸ್ 27 ಎಸೆತಗಳಲ್ಲಿ 44, ಶಿವಮ್ ದುಬೆ 26, ಪ್ರಶಾಂತ್ ವೀರ್ 11 ಹಾಗೂ ಅಕಿಲ್ ಹೊಸೈನ್ ಅಜೇಯ 3 ರನ್ ಗಳಿಸಿದರು.
ಸನ್ ರೈಸರ್ಸ್ ಹೈದರಾಬಾದ್ ಪರ ನಾಯಕ ಪ್ಯಾಟ್ ಕಮಿನ್ಸ್ ಮೂರು ವಿಕೆಟ್, ಸಕಿಬ್ ಹುಸೈನ್ ಎರಡು ವಿಕೆಟ್, ಪ್ರಫುಲ್ ಹಿಂಗೆ ಹಾಗೂ ಇಶಾನ್ ಮಲಿಂಗ ತಲಾ ಒಂದೊಂದು ವಿಕೆಟ್ ಪಡೆದರು.
ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಟ್ರಾವಿಸ್ ಹೆಡ್ ಕೇವಲ 6 ರನ್ ಗಳಿಸಿದರೆ, ಅಭಿಷೇಕ್ ಶರ್ಮಾ 26 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಹೀಗೆ ಬೇಗನೆ ಆರಂಭಿಕರ ವಿಕೆಟ್ ಕಳೆದುಕೊಂಡ ತಂಡಕ್ಕೆ ಮೂರನೇ ವಿಕೆಟ್ಗೆ ಜತೆಯಾದ ಹೆನ್ರಿಕ್ ಕ್ಲಾಸೆನ್ ಹಾಗೂ ಇಶಾನ್ ಕಿಶನ್ ಜೋಡಿ 75 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಹೆನ್ರಿಕ್ ಕ್ಲಾಸೆನ್ 26 ಎಸೆತಗಳಲ್ಲಿ 47 ರನ್ ಗಳಿಸಿದರೆ, ಇಶಾನ್ ಕಿಶನ್ 47 ಎಸೆತಗಳಲ್ಲಿ 70 ರನ್ ಗಳಿಸಿ ಅಮೋಘ ಪ್ರದರ್ಶನ ನೀಡಿದರು. ಇನ್ನುಳಿದಂತೆ ನಿತಿಶ್ ಕುಮಾರ್ ರೆಡ್ಡಿ 11, ಸಲೀಲ್ ಅರೋರಾ ಅಜೇಯ 10 ಹಾಗೂ ಸ್ಮರಣ್ ರವಿಚಂದ್ರನ್ ಅಜೇಯ 5 ರನ್ ಬಾರಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಮುಕೇಶ್ ಕುಮಾರ್ ಎರಡು ವಿಕೆಟ್, ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್ ಹಾಗೂ ಅಕಿಲ್ ಹೊಸೈನ್ ತಲಾ ಒಂದೊಂದು ವಿಕೆಟ್ ಪಡೆದರು.

