ಬೆಂಗಳೂರು : ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ (Pre-Monsoon Rains) ಭಾರಿ ತಲ್ಲಣ ಸೃಷ್ಟಿಸಿದ್ದು, ಮುಂದಿನ 3 ರಿಂದ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ವರುಣನ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕ ಜೀವನ ಅಸ್ತವ್ಯಸ್ತಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಒಳನಾಡಿನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಜೊತೆಗೆ, ತೀವ್ರ ಗಾಳಿಯ ವೇಗ ಇರಲಿದ್ದು, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳ ಮುನ್ಸೂಚನೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ (ಗಂಟೆಗೆ 40 ರಿಂದ 50 ಕಿ.ಮೀ ವೇಗ) ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

