ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿ ಜಿಲ್ಲೆಯ 15 ಒಬಿಸಿ ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣದ ಜೊತೆಗೆ ನೀಟ್, ಸಿಇಟಿ, ಜೆಇಇ ಪರೀಕ್ಷಾ ಪೂರ್ವ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸೀಮಿತವಾಗಿ ಈ ಯೋಜನೆ ಆರಂಭಿಸಲಾಗುತ್ತಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಪ್ರತಿ ಜಿಲ್ಲೆಗೆ 15 ಮಂದಿಯಂತೆ ಆಯ್ಕೆ ಮಾಡಲಾಗುವುದು. ಒಟ್ಟು 500 ವಿದ್ಯಾರ್ಥಿಗಳಿಗೆ 15 ಕೋಟಿ ರೂ. ವೆಚ್ಚದಲ್ಲಿ ಎರಡು ವರ್ಷ ವಸತಿ ಸಹಿತ ಪ್ರಥಮ ಮತ್ತು ದ್ವಿತೀಯ ಪಿಯುಸಿ ಶಿಕ್ಷಣದ ಜೊತೆಗೆ ನೀಟ್, ಸಿಇಟಿ, ಜೆಇಇ ಪರೀಕ್ಷೆ ಪೂರ್ವ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಓದಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಣಿತ ವಿಜ್ಞಾನ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿ ಜಿಲ್ಲೆಗೆ 15ರಂತೆ 500 ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 15 ಕೋಟಿ ರೂ. ವೆಚ್ಚದಲ್ಲಿ ಎರಡು ವರ್ಷಗಳ ವಸತಿ ಸಹಿತ ಫ್ರೀ ಕೋಚಿಂಗ್ ನೀಡಲಾಗುವುದು. ಪಿಯುಸಿ ಜೊತೆಗೆ ನೀಟ್, ಸಿಇಟಿ, ಜೆಇಇ ಕೋಚಿಂಗ್ ನೀಡಲಾಗುವುದು ಎನ್ನಲಾಗಿದೆ.

