ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, 17 ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬಳ್ಳಾರಿ, ರಾಯಚೂರು, ಯಾದಗಿರಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24 ರಂದು ಗುಡುಗು, ಮಿಂಚು ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಮೇ 25 ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗಲಿದ್ದು, ಕರಾವಳಿ ಭಾಗದಲ್ಲಿ ಸಾಧಾರಣದಿಂದ ಕೂಡಿದ ಮಧ್ಯಮ ಮಳೆಯಾಗುವ ಸಂಭವವಿದೆ. ಕೆಲವು ಕಡೆ ಗಂಟೆಗೆ 50 ರಿಂದ 60 ಕಿ.ಮೀ. ವೇಗದ ಗಾಳಿ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಳೆ ಬಂದಾಗ ಮರಗಳು, ಶಿಥಿಲವಾದ ಮನೆ, ಕಟ್ಟಡ, ಮರಗಳ ಕೆಳಗೆ ನಿಲ್ಲದೆ ಸುಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ.

