ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಿತಿನ್ ನಬಿನ್ ಕರ್ನಾಟಕಕ್ಕೆ ಅವರ ಮೊದಲ ಭೇಟಿ ಇದಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ತಡರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದರು. ಅಲ್ಲಿಂದ ಹೆಬ್ಬಾಳದ ಖಾಸಗಿ ಹೋಟೆಲ್ ಗೆ ತೆರಳಿ ವಾಸ್ತವ್ಯ ಹೂಡಿದರು,
ಇಂದು ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬಿಎಸ್ವೈ ನಿವಾಸದಲ್ಲಿ ಉಪಾಹಾರ ಸೇವಿಸಲಿರುವ ನಿತಿನ್ ನಬಿನ್, ನಂತರ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಲಿದ್ದಾರೆ. ಆ ಬಳಿಕ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಬಿಜೆಪಿ ಕಚೇರಿಯಲ್ಲಿ ನಿತಿನ್ ನಬಿನ್ ಸರಣಿ ಹೈವೋಲ್ಟೇಜ್ ಸಭೆಗಳನ್ನು ನಡೆಸಲಿದ್ದಾರೆ. ರಾಜ್ಯದ ಹಾಲಿ, ಮಾಜಿ ಶಾಸಕರು, ಸಂಸದರು, ಎಂಎಲ್ ಸಿಗಳ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಜೆಪಿಯಲ್ಲಿನ ಆಂತರಿಕ ಸಂಘರ್ಷ, ಬಿನ್ನಮತಕ್ಕೆ ಫುಲ್ ಸ್ಟಾಪ್ ಇಡಲು ರಾಷ್ಟ್ರಾಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುವ ಬಗ್ಗೆಯೂ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಈಗಿನಿಂದಲೇ ನಡೆಸಬೇಕಾದ ತಯಾರಿ ಬಗ್ಗೆಯೂ ಚರ್ಚಿಸಲಿದ್ದಾರೆ.

