ನವದೆಹಲಿ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಸಿಂಧುತ್ವವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, ಈ ಪ್ರಕ್ರಿಯೆಯ ಅಡಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವುದು ವ್ಯಕ್ತಿಯ ಪೌರತ್ವವನ್ನು ನಿರ್ಧರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತೀಯ ಚುನಾವಣಾ ಆಯೋಗವು (ECI) ಬಿಹಾರದಲ್ಲಿ ಪ್ರಾರಂಭಿಸಿದ ವಿಶೇಷ ತೀವ್ರಗತಿಯ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಮತದಾರರ ಪಟ್ಟಿ ಪರಿಷ್ಕರಣೆಯ ಸಾಮಾನ್ಯ ಪ್ರಕ್ರಿಯೆಗಿಂತ ಭಿನ್ನವಾಗಿದೆ ಎಂಬ ಕಾರಣಕ್ಕಾಗಿ ಮಾತ್ರ ಈ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ಕಾನೂನುಬಾಹಿರ (ultra vires) ಎಂದು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದೆ.
ಈ ವಿಶೇಷ ಪರಿಷ್ಕರಣಾ ಪ್ರಕ್ರಿಯೆಯನ್ನು ನ್ಯಾಯಾಲಯವು ನ್ಯಾಯಸಮ್ಮತ ಮತ್ತು ಸಾಂವಿಧಾನಿಕ ಎಂದು ಕರೆದಿದೆ. “ಈ ಪ್ರಕ್ರಿಯೆಯು ಕಾನೂನುಬದ್ಧವಾಗಿ ಸಮರ್ಥನೀಯವಾಗಿದೆ” ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ನೇತೃತ್ವದ ಪೀಠವು, SIR ಅಡಿಯಲ್ಲಿ ನಡೆಸುವ ವಿಚಾರಣೆಯು ಕೇವಲ ಚುನಾವಣೆಯಲ್ಲಿ ಭಾಗವಹಿಸುವಿಕೆಗೆ ಸೀಮಿತವಾಗಿದೆಯೇ ಹೊರತು, ಅದು ಪೌರತ್ವವನ್ನು ನಿರ್ಧರಿಸುವ ಪ್ರಕ್ರಿಯೆಯಲ್ಲ ಎಂದು ತಿಳಿಸಿದೆ.ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಹೆಸರನ್ನು ಸೇರಿಸುವ ಅಥವಾ ತೆಗೆದುಹಾಕುವ ಉದ್ದೇಶಕ್ಕಾಗಿ ಮಾತ್ರ ವ್ಯಕ್ತಿಯ ಪೌರತ್ವದ ಬಗ್ಗೆ ಪರಿಶೀಲನೆ ನಡೆಸಬಹುದೇ ಹೊರತು, ಅದು ವ್ಯಕ್ತಿಯ ಪೌರತ್ವದ ಸ್ಥಾನಮಾನವನ್ನು ನಿರ್ಧರಿಸುವ ಅಧಿಕಾರ ಹೊಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.
2002/2003ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಮತದಾರರು ತಮ್ಮ ಪೂರ್ವಜರ ದಾಖಲೆಗಳನ್ನು ಸಲ್ಲಿಸಬೇಕೆಂಬ ಚುನಾವಣಾ ಆಯೋಗದ ನಿಯಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನು “ಹಿಂಬಾಗಿಲಿನ ಮೂಲಕ ಪೌರತ್ವ ಪರಿಶೀಲನೆ” ಎಂದು ಅರ್ಜಿದಾರರು ವಾದಿಸಿದ್ದರು.ಮತದಾರರ ಪಟ್ಟಿಯಿಂದ ಹೆಸರು ಹೊರಗುಳಿದಿದ್ದರೂ, ಆ ವ್ಯಕ್ತಿಯು ಭಾರತೀಯ ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ. ಇದು ಕೇವಲ ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆಯಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸದ್ಯ ಈ SIR ಪ್ರಕ್ರಿಯೆಯು ದೇಶದ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಯಲ್ಲಿದೆ.

