ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ.
ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಮೂವರು ಬಾಲಕರು ಕೆರೆಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ದುರಂತಕ್ಕೀಡಾಗಿದ್ದಾರೆ. ಮೃತರಲ್ಲಿ ಅಬ್ಬಾಸ್ ಮತ್ತು ಅಸ್ಲಂ ಸಹೋದರರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತೆರಳಿರುವ ಅಗ್ನಿಶಾಮಕ ಸಿಬ್ಬಂದಿ ಮೂವರು ಬಾಲಕರ ಶವಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಘಟನಾ ಸ್ಥಳಕ್ಕೆ ಧಾರವಾಡ ಎಸ್ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

