ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ವರುಣಾರ್ಭಟ ಜೋರಾಗಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ,
ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಸಿಡಿಲು ಸಂಭವಿಸುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿರುವ ಬಲವಾದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಾಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಇಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

