ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಭಾನುವಾರ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಕನಕಪುರಕ್ಕೆ ಆಗಮಿಸಲಿರುವ ಸಿಎಂ ನಂತರ ಕ್ಷೇತ್ರ ವ್ಯಾಪ್ತಿಯ 20 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆಗುವ ತಮ್ಮ ಕನಸನ್ನು ನನಸಾಗಿಸಲು ಹರಸಿದ ತವರೂರಿನ ಜನತೆಗೆ ಕೃತಜ್ಞತೆ ಅರ್ಪಿಸಲಿದ್ದಾರೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆಯವರೆಗೆ ಭಾನುವಾರ ಇಡೀ ದಿನ ಕನಕಪುರ ಕ್ಷೇತ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ಪ್ರತಿ ಗ್ರಾಮ ಪಂಚಾಯಿತಿಗೂ 30 ನಿಮಿಷ ಭೇಟಿಗೆ ಸಮಯ ನಿಗದಿಪಡಿಸಲಾಗಿದೆ.
ಕನಕಪುರದ ಹಳ್ಳಿಗಳಿಗೆ ಭಾನುವಾರ ಭೇಟಿ ನೀಡಲಿರುವ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಜನತೆಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಬಳಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ವಿಧಾನಸೌಧದಿಂದ ಕನಕಪುರ ರಸ್ತೆಯ ಕೊನೆಯ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

