ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ ಜೋರಾಗಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಗುಡುಗು, ಬಿರುಗಾಳಿ ಸಹಿತ ಮಳೆ ಅಬ್ಬರಲಿಸಲಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸಬಹುದು. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ರಾಜ್ಯದ ಒಟ್ಟು 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು ಸೇರಿದಂತೆ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಗುಡುಗಿನ ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ತಿಳಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಿರಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

