ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ವಾರದೊಳಗೆ ನೇಮಕಾತಿ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 900ರಷ್ಟು ವೈದ್ಯರ ಹುದ್ದೆಗಳು ಖಾಲಿ ಇದ್ದು, ವಾರದೊಳಗೆ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಎಂಬಿಬಿಎಸ್ ಪೂರ್ಣಗೊಳಿಸಿದವರು ಕರ್ತವ್ಯ ನಿರ್ವಹಿಸಲು ಬಂದಲ್ಲಿ ಅವರಿಗೆ ಆಯಾ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ವಾರದೊಳಗೆ ತಾತ್ಕಾಲಿಕ ನೇಮಕಾತಿ ಆದೇಶ ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು. ನೇಮಕವಾದವರಿಗೆ ಮಾಸಿಕ 60,000 ರೂ. ವೇತನ ನೀಡಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನದಲ್ಲಿದೆ. ಕಾಯಂ ನೇಮಕಾತಿ ಆಗುವವರೆಗೆ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳಲಿದ್ದು, ಎಂದು ಹಂತವಾಗಿ ವಿವಿಧ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.

