ಮಂಗಳೂರು : ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ ದಳಪತಿ ವಿಜಯ್ ಅವರು ಶುಕ್ರವಾರ ಕರ್ನಾಟಕದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದರು.
ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ರನ್ನು ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು.ಶರ್ಟ್ ಕಳಚಿ ಕೆಂಪು ಬಣ್ಣದ ಶಲ್ಯ ಹೊದ್ದು ದೇವಾಲಯದ ಒಳಗೆ ಆಗಮಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ವಿಜಯ್, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದರು..ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಡ್-ಪ್ಲಸ್ ಭದ್ರತೆ ಹೊಂದಿರುವ ಮುಖ್ಯಮಂತ್ರಿ ವಿಜಯ್ ಅವರ ಭದ್ರತೆಗೆ ಕರ್ನಾಟಕ ಮತ್ತು ತಮಿಳುನಾಡು ಪೊಲೀಸರ ವಿಶೇಷ ತಂಡ ನಿಯೋಜಿಸಲಾಗಿತ್ತು.
ವಿಜಯ್ ಅವರನ್ನು ಒಂದು ನೋಟ ನೋಡಲು ಮಾರ್ಗದುದ್ದಕ್ಕೂ ಅಭಿಮಾನಿಗಳು ಕಾದು ನಿಂತಿದ್ದು, ಅವರ ಆಗಮನದಿಂದ ಕೊಲ್ಲೂರು ಹಾಗೂ ಮಂಗಳೂರು ಭಾಗದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

