HomeKarnatakaಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕೇಂದ್ರಸ್ಥಾನದಲ್ಲಿ ವಾಸವಿರಬೇಕು: ಪ್ರತಿದಿನ ಬೆಳಗ್ಗೆ 10 ಗಂಟೆಗೆ ಕರ್ತವ್ಯ ಆ್ಯಪ್ ಮೂಲಕ...

ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕೇಂದ್ರಸ್ಥಾನದಲ್ಲಿ ವಾಸವಿರಬೇಕು: ಪ್ರತಿದಿನ ಬೆಳಗ್ಗೆ 10 ಗಂಟೆಗೆ ಕರ್ತವ್ಯ ಆ್ಯಪ್ ಮೂಲಕ ಹಾಜರಾತಿ ಕಡ್ಡಾಯ

ಹಾಸನ: ಸರ್ಕಾರಿ ಕಚೇರಿಗಳ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರತಿದಿನ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಿ ಕರ್ತವ್ಯ ಆ್ಯಪ್ ಮೂಲಕ ಹಾಜರಾತಿ ಕಡ್ಡಾಯವಾಗಿ ಹಾಕಬೇಕು. ಜೊತೆಗೆ ಕೇಂದ್ರ ಸ್ಥಾನದಲ್ಲಿ ವಾಸವಿರಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸೂಚಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ನೀಡಿದ ನಿರ್ದೇಶನದಂತೆ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಯವರು ಪ್ರತಿ ಸರ್ಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು ಎಂದರಲ್ಲದೆ, ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರತಿ ಮಾಹೆಯ ಮೊದಲ ಶನಿವಾರ ತಾಲ್ಲೂಕು ಮಟ್ಟದಲ್ಲಿ, ಮೂರನೇ ಶನಿವಾರ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇನ್ನೂ ಮುಂದೆ ಪ್ರತಿ ಮಾಹೆಯಲ್ಲಿ ಒಂದು ದಿನ ಗ್ರಾಮ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುವ ಮೂಲಕ ಸಮಸ್ಯೆಗಳನ್ನು ಅವಲೋಕಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಕಚೇರಿಗಳಲ್ಲಿ ಲಂಚ ಮುಕ್ತ ಕಚೇರಿ ಎಂದು ಫಲಕ ಅಳವಡಿಸುವುದರ ಜೊತೆಗೆ ನೋಡಲ್ ಅಧಿಕಾರಿ ನೇಮಕ ಮಾಡಬೇಕು ಮೊಬೈಲ್ ನಂಬರ್ ಹಾಕಬೇಕು. ಯಾವುದೇ ದೂರು ಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಮದ್ಯಪಾನ, ಉಗುಳುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದ್ದು, ಧೂಮಪಾನ ಮಾಡುವುದು ಕಂಡುಬAದಲ್ಲಿ ದಂಡ ವಿಧಿಸುವಂತೆ ತಿಳಿಸಿದರು. ಸರ್ಕಾರಿ ಕಚೇರಿಗಳಲ್ಲಿ ಧೂಮಪಾನ ಮುಕ್ತ ಕಚೇರಿ ಎಂದು ಫಲಕ ಅಳವಡಿಸಲು ಸೂಚಿಸಿದರು.

ಜೂನ್ 28 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ವಲಸೆ ಕಾರ್ಮಿಕರು ಪತ್ತೆ ಹಚ್ಚಿ ಯಾವುದೇ ಮಗುವಿಗೂ ತಪ್ಪಿಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು, ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಸಿರು ಹಾಸನ ಕಾರ್ಯಕ್ರಮದಡಿಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಜೂನ್ ನಿಂದ ಆಗಸ್ಟ್ ವರೆಗೆ ಗಿಡ ನೆಟ್ಟು ಪೋಷಣೆ ಮಾಡಲು ಪ್ರತಿ ಇಲಾಖೆ ಅಧಿಕಾರಿಗಳು ಕ್ರಮವಹಿಸಲು ಸೂಚನೆ ನೀಡಿದರು.

ಸರ್ಕಾರಿ ಕಟ್ಟಡಗಳು ವಾಸಿಸಲು ಯೋಗ್ಯವಾಗಿಲ್ಲದಿರುವುದನ್ನು ಗುರುತಿಸಿ ತಾಂತ್ರಿಕವಾಗಿ ಇಂಜಿನಿಯರ್‌ಗಳು ಪರಿಶೀಲನೆ ಮಾಡಿ ಡೆಮಾಲಿಶ್ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೈಕ್ರೋ ಫೈನಾನ್ಸ್, ಚೈನ್ ಲಿಂಕ್ ಹಣಕಾಸು ವ್ಯವಹಾರ ನಡೆಸುವ ಕಂಪನಿಗಳನ್ನು ಗುರುತಿಸಿ ಅವರೊಂದಿಗೆ ಸಭೆ ನಡೆಸಿ ಜೊತೆಗೆ ಸಾರ್ವಜನಿಕರು ತೊಂದರೆಗೆ ಸಿಲುಕದಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಘನತ್ಯಾಜ್ಯವನ್ನು ಸಮರ್ಪಕ ವಿಲೇವಾರಿಗೆ. ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಬಯೋಮೇಡಿಕಲ್ ವೆಸ್ಟ್ಅನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದು ಕಂಡುಬರುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.

ಕಲ್ಯಾಣ ಮಂಟಪ, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಕಡೆಗಳಲ್ಲಿ ಬಲ್ಕ್ ಆಗಿ ಉತ್ಪಾದನೆ ಆಗುವ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕಿದರೆ ವಿದ್ಯುತ್ ಕಡಿತಗೊಳಿಸುವುದರ ಜೊತೆಗೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಬ್ಲಾಕ್ ಸ್ಪಾಟ್ ಗುರುತಿಸಿ ಅಗತ್ಯ ಕ್ರಮ ಕೈಗೊಂಡು ಅಪಘಾತ ತಡೆಯುವ ಮೂಲಕ ಸಾವಿನ ಪ್ರಮಾಣ ಕಡಿಮೆ ಮಾಡುವ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಸುರಕ್ಷತೆ ದೃಷ್ಟಿಯಿಂದ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮವಹಿಸಲು ತಿಳಿಸಿದರಲ್ಲದೆ, ಇಲಾಖೆ ವತಿಯಿಂದ ನಗರದ ಮುಖ್ಯ ವೃತ್ತಗಳಲ್ಲಿ ಎ.ಎನ್.ಪಿ.ಎಲ್ ಕ್ಯಾಮೆರಾ ಅಳವಡಿಕೆಗೆ ಕ್ರಮವಹಿಸಲು ಸೂಚನೆ ನೀಡಿದರು.

ಸೂಚನಾ ಮತ್ತು ಎಚ್ಚರಿಕೆ ಫಲಕ ಅಳವಡಿಸುವುದು, ರಿಪ್ಲೆಕ್ಟರ್ ಬಿಳಿ ಬಣ್ಣದ ಪಟ್ಟೆ ಹಾಕಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಜವಾಬ್ದಾರಿಯುತವಾಗಿ ಬಸ್ ಚಾಲನೆ ಮಾಡುವಂತೆ ಬಸ್ ಚಾಲಕರಿಗೆ ತರಬೇತಿ ನೀಡಿ ನಗರ ಪ್ರದೇಶಗಳಲ್ಲಿ ವೇಗದ ಮಿತಿ 40ಕ್ಕೆ ನಿಗದಿ ಪಡಿಸುವಂತೆ ಹಾಗೂ ವೃತ್ತಗಳಲ್ಲಿ ಎಚ್ಚರಿಕೆವಹಿಸಿ ಚಾಲನೆ ಮಾಡುವಂತೆ ಜೊತೆಗೆ ನಿಗದಿತ ಸ್ಥಳಗಳಲ್ಲಿ ಮಾತ್ರ ಬಸ್ ನಿಲುಗಡೆ ಮಾಡಲು ಚಾಲಕರಿಗೆ ಸೂಚಿಸುವಂತೆ ಕೆ.ಎಸ್.ಆರ್.ಟಿಸಿ ವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಪಘಾತಗಳನ್ನು ತಡೆಗಟ್ಟಿ ಮರಣ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆಟೋಗಳನ್ನು ನಿಗದಿತ ಸ್ಥಳದಲ್ಲಿ ನಿಲುಗಡೆಗೆ ನಿಲ್ದಾಣಗಳನ್ನು ಗುರುತಿಸಿ ಎಂದರಲ್ಲದೆ, ಟ್ರಾಕ್ ನಿಲುಗಡೆಗೆ ಸ್ಥಳ ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರಸ್ತೆ ಸುರಕ್ಷತೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲು ಶಾಲೆಗಳಲ್ಲಿ ಪೊಸ್ಟರ್ ಅಳವಡಿಸಿ ಎಂದು ತಿಳಿಸಿದರು.

ರಸ್ತೆ ಒತ್ತುವರಿ ತೆರವಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಡೆಸದಂತೆ ತೆರವುಗೊಳಿಸಲು ಸೂಚನೆ ನೀಡಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಘನತ್ಯಾಜ್ಯ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ನಿಗಾ ವಹಿಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು, ಅನಧಿಕೃತವಾಗಿ ರಸ್ತೆ ಬದಿಗಳಲ್ಲಿ ಕಸ ಹಾಕುವುದನ್ನು ತಡೆಯಬೇಕು ಕಸವಿದ್ದಲ್ಲಿ ತೆಗೆಸುವುದಕ್ಕೆ ಯಾವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ರಸ್ತೆಗಳು ಒಳಪಡುತ್ತದೆ ಅವರೆ ಜವಾಬ್ದಾರಿವಹಿಸಬೇಕು ಎಂದು ತಿಳಿಸಿದರು.

ಪ್ರತಿ ವಾರ್ಡ್ ನಲ್ಲಿ ಸ್ವಚ್ಚತಾ ಸಮಿತಿಯನ್ನು ರಚಿಸಬೇಕು. ಸಾರ್ವಜನಕರು ಮೂಲದಲ್ಲಿಯೇ ಕಸ ವಿಗಂಡಣೆ ಮಾಡಿ ನೀಡಲು ಕ್ರಮವಹಿಸಬೇಕು. ಸ್ವಚ್ಚತೆ ಕಾಪಾಡಲು ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿಯೂ ಬೋರ್ಡ್ ಅಳವಡಿಸಿ ಎಂದು ತಿಳಿಸಿದರು.

ಕೈಗಾರಿಕೆಗಳಿಂದ ಕೆರೆ, ಕಟ್ಟೆಗಳಿಗೆ ತ್ಯಾಜ್ಯ ನೀರು ಬಿಡುವುದರಿಂದ ನೀರು ಕಲುಷಿತಗೊಂಡು ಬಳಕೆಗೆ ಯೋಗ್ಯವಾಗಿರುವುದಿಲ್ಲ ಇಂತಹದ್ದು ಕಂಡುಬAದರೆ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲ ಪ್ರಾರಂಭವಾಗಿದ್ದು ಬಿಳುವ ಹಂತದಲ್ಲಿ ಇರುವ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳನ್ನು ತೆರವು ಗೊಳಿಸಲು ಹಾಗೂ ವಿದ್ಯುತ್ ತಂತಿಗಳನ್ನು ಸರಿಪಡಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯೋಗ ಮಹಿಳೆಯರಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಪ್ರಸ್ತುತ ಲಭ್ಯವಿರುವ ಕಟ್ಟಡದಲ್ಲಿ ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿzರು

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀನಿಧಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular