ಬೆಂಗಳೂರು: ಕೊಲೆ ಪ್ರಕರಣದ ತನಿಖೆ ನೆಪದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಆರೋಪದ ಮೇಲೆ ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ..
ಬಂಧಿತ ಪಿಎಸ್‌ಐ ಪ್ರವೀಣ್ ಅವರು ನಗರದ ಈಶಾನ್ಯ ವಿಭಾಗದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮಾಹಿತಿ ಪ್ರಕಾರ, ಕೆಲವು ತಿಂಗಳ ಹಿಂದೆ ಅಮೃತಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ತನಿಖೆ ಸಂಬಂಧ ಪ್ರವೀಣ್ ಕೆಲ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದರು.
ಬಳಿಕ ಬಾಲಕರನ್ನು ಖಾಸಗಿ ಸ್ಥಳಕ್ಕೆ ಕರೆದೊಯ್ದು ಬೆಲ್ಟ್‌ನಿಂದ ಥಳಿಸಿ, ಬಟ್ಟೆ ಬಿಚ್ಚುವಂತೆ ಬಲವಂತಪಡಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.ಇದಷ್ಟೇ ಅಲ್ಲದೆ, ಅಪ್ರಾಪ್ತ ಬಾಲಕರಿಂದ ಅಶ್ಲೀಲ ಕೃತ್ಯಗಳನ್ನು ಮಾಡಿಸಿ, ಅದನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.
ಇತ್ತೀಚೆಗೆ ಈ ವಿಡಿಯೋಗಳು ಸೋರಿಕೆಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೋಕ್ಸೋ ಕಾಯ್ದೆ–2012) ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಪೊಲೀಸರ ಪ್ರಕಾರ, ಅಪ್ರಾಪ್ತ ಬಾಲಕರನ್ನು ಅಶ್ಲೀಲ ಕೃತ್ಯಗಳಲ್ಲಿ ತೊಡಗುವಂತೆ ಬಲವಂತಪಡಿಸಿ, ಅದರ ವಿಡಿಯೋವನ್ನು ಮೊಬೈಲ್‌ನಲ್ಲಿ ದಾಖಲಿಸಿಕೊಂಡಿದ್ದಾನೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಆಧಾರದ ಮೇಲೆ ಕೋತನೂರು ಪೊಲೀಸರು ಸೋಮವಾರ ಸಂಜೆ ಪಿಎಸ್‌ಐ ಪ್ರವೀಣ್ ಅವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

