ಬೆಂಗಳೂರು: ನಗರದ ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 7 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಈ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಮಾಹಿತಿಯ ಪ್ರಕಾರ, ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೃಹತ್ ಬಂಡೆ ಕುಸಿದು ಬಿದ್ದಿದೆ. ಪರಿಣಾಮ ಅವಶೇಷಗಳಡಿ ಸಿಲುಕಿದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಅವಶೇಷಗಳಡಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದ್ದು, ಜೆಸಿಬಿ ಯಂತ್ರಗಳ ಸಹಾಯದಿಂದ ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದೆ. ಮೃತರ ಗುರುತು ಪತ್ತೆ ಹಾಗೂ ದುರಂತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ. ಕ್ವಾರಿಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

