ಬಳ್ಳಾರಿ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಮೌಲ್ಯಗಳನ್ನು ಬೋಧಿಸಬೇಕಾದ ಉಪನ್ಯಾಸಕನೇ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಂಧಿತ ರವಿಕಿರಣ್ ಬಳ್ಳಾರಿ ನಗರದ ಖಾಸಗಿ ಕಾಲೇಜಿನಲ್ಲಿ ಬೋಟನಿ (ಸಸ್ಯಶಾಸ್ತ್ರ) ವಿಭಾಗದ ಉಪನ್ಯಾಸಕರಾಗಿದ್ದು, ಅವರಿಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಪರಿಚಯದಿಂದ ಪ್ರೇಮದ ನಾಟಕ, ಬಳಿಕ ಲೈಂಗಿಕ ದೌರ್ಜನ್ಯ
ಪೊಲೀಸರ ಮಾಹಿತಿ ಪ್ರಕಾರ, 2025ರಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಉಪನ್ಯಾಸಕನ ನಡುವೆ ಕಾಲೇಜಿನಲ್ಲಿ ಪರಿಚಯ ಬೆಳೆದಿತ್ತು. ಬಳಿಕ ಸ್ನೇಹದ ಹೆಸರಿನಲ್ಲಿ ವಿದ್ಯಾರ್ಥಿನಿಯ ವಿಶ್ವಾಸ ಗಳಿಸಿದ ರವಿಕಿರಣ್, “ನಿನ್ನನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆ” ಎಂದು ನಂಬಿಸಿದ್ದಾನೆ ಎನ್ನಲಾಗಿದೆ.
ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ಆರೋಪಿಯು ವಿದ್ಯಾರ್ಥಿನಿಯನ್ನು ಹಲವು ಬಾರಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮದುವೆಯಾಗಿರುವ ಸತ್ಯ ಬಯಲು
ಕೆಲವು ದಿನಗಳ ಬಳಿಕ ರವಿಕಿರಣ್ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ವಿಚಾರ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬಕ್ಕೆ ತಿಳಿದುಬಂದಿದೆ. ಇದರಿಂದ ತೀವ್ರ ಆಘಾತಕ್ಕೊಳಗಾದ ಪೋಷಕರು ತಕ್ಷಣವೇ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ
ಪೋಷಕರ ದೂರಿನ ಆಧಾರದ ಮೇಲೆ ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಪೋಕ್ಸೋ (POCSO) ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸರ ತನಿಖೆ ಮುಂದುವರಿಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ವಿದ್ಯಾರ್ಥಿನಿಯ ಹೇಳಿಕೆ ಸೇರಿದಂತೆ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

