ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 4 ಮತ್ತು 5ರಂದು ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜುಲೈ 4 ಮತ್ತು 5ರಂದು ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಭಾರೀ ಮಳೆಯಿಂದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕೆಲವೆಡೆ ಅತಿಭಾರೀ ಮಳೆಯಾಗುವ ಸಾಧ್ಯತೆಯಿದೆ. ನದಿಗಳು, ಹಳ್ಳಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಜುಲೈ 4 ಮತ್ತು ಜುಲೈ 5 ರಂದು ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಹೆಚ್ಚಾಗಿದೆ. ಜುಲೈ 5ರಿಂದ 9ರವರೆಗೆ ಒಂದೆರಡು ಸ್ಥಳಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನಿರಂತರ ಮಳೆಯಿಂದ ಬೆಟ್ಟಗಳ ಇಳಿಜಾರು ಪ್ರದೇಶಗಳಲ್ಲಿ ಮಣ್ಣು ಸಡಿಲಗೊಳ್ಳುವ ಸಾಧ್ಯತೆ ಇರುವುದರಿಂದ ಭೂಕುಸಿತದ ಅಪಾಯ ಹೆಚ್ಚಿದೆ ಎಂದು ತಜ್ಞರು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭೂಕುಸಿತ ಸಂಭವಿಸುವ ಪ್ರದೇಶಗಳ ನಿವಾಸಿಗಳು ಹಾಗೂ ತಗ್ಗು ಪ್ರದೇಶದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.ಮಳೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ಪ್ರಯಾಣ ಮಾಡದಂತೆ, ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ.

