ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ.ಆರ್. ಸರ್ಕಲ್ನಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿಗ್ನಲ್ನಲ್ಲಿ ನಿಂತಿದ್ದ ವಾಯುವಜ್ರ (Vayu Vajra) ಬಸ್ಗೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ (BMTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬಿಎಂಟಿಸಿ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಡಿಕ್ಕಿಯ ರಭಸಕ್ಕೆ ಬಿಎಂಟಿಸಿ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಎರಡೂ ಬಸ್ಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರೆ, ಇನ್ನೂ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ವೇಳೆ ಬಿಎಂಟಿಸಿ ಬಸ್ನ ಬಾಗಿಲಿಗೆ ಮಹಿಳೆಯೊಬ್ಬರ ಕಾಲು ಸಿಲುಕಿಕೊಂಡಿದ್ದು, ಅವರು ಕೆಲಕಾಲ ತೀವ್ರ ನೋವು ಅನುಭವಿಸಿದರು. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸಿಬ್ಬಂದಿ ಕೂಡಲೇ ನೆರವಿಗೆ ಧಾವಿಸಿ ಅವರನ್ನು ಸುರಕ್ಷಿತವಾಗಿ ಹೊರತೆಗೆದರು.
ಇನ್ನೊಂದೆಡೆ, ಡಿಕ್ಕಿಯ ರಭಸಕ್ಕೆ ಬಸ್ನ ಹಿಂಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರು ಮುಂದಕ್ಕೆ ಎಸೆಯಲ್ಪಟ್ಟಿದ್ದು, ಇದರಿಂದ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಅಪಘಾತದ ಬಳಿಕ ಕೆ.ಆರ್. ಸರ್ಕಲ್ನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ಸುಗಮಗೊಳಿಸಿದರು. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

