ಬೆಂಗಳೂರು : ನಗರದ ಸದಾಶಿವನಗರದ ಸ್ಯಾಂಕಿ ಕೆರೆಯಲ್ಲಿ ಹಾರಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಚಿಕ್ಕಬಾಣಾವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಆತ್ಮಹತ್ಯೆಗೂ ಮುನ್ನ ತೇಜು ತನ್ನ ಪ್ರಿಯಕರನಿಗೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದಾಳೆ ಎನ್ನಲಾಗಿದೆ. ಬಳಿಕ ಸದಾಶಿವನಗರದ ಸ್ಯಾಂಕಿ ಕೆರೆಗೆ ತೆರಳಿ ನೀರಿಗೆ ಹಾರಿದ್ದಾಳೆ. ಸ್ಥಳೀಯರು ಘಟನೆ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಸದಾಶಿವನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಜೀವನ ಸಾಕಾಗಿದೆ
ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ಕಾರಣಕ್ಕೆ ವಿದ್ಯಾರ್ಥಿನಿ ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನನಗೆ ಜೀವನ ಸಾಕಾಗಿದೆ ಎಂದು ಪ್ರಿಯಕರನಿಗೆ ಮೆಸೇಜ್ ಮಾಡಿ ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿ ನದಿಗೆ ಹಾರಿದ್ದಾಳೆ. ತೇಜು ಅವರ ತಂದೆ ನಮ್ಮ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೊಬೈಲ್ ಸಂದೇಶಗಳು ಸೇರಿದಂತೆ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಲಾಗುತ್ತಿದೆ.

