ಬೆಂಗಳೂರು : ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಡಾ. ದೇವರಾಜ ಬಿ. ಕೆ.ಎ.ಎಸ್. ಅವರು ಈ ಸಂಬಂಧ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯದ ಎಲ್ಲಾ ಸಾರ್ವಜನಿಕ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಮತ್ತು ಧೂಮಪಾನದಿಂದ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ತಡೆಗಟ್ಟುವ ಉದ್ದೇಶದಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ತಿಳಿಸಲಾಗಿದೆ.
ಈ ಕ್ರಮಕ್ಕೆ ಹಿನ್ನೆಲೆಯಾಗಿ, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ಬರೆದ ಪತ್ರವನ್ನು ಉಲ್ಲೇಖಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಸೂಕ್ತ ಆದೇಶ ಮತ್ತು ನಿರ್ದೇಶನಗಳನ್ನು ಹೊರಡಿಸುವಂತೆ ಅವರು ಮನವಿ ಮಾಡಿದ್ದರು. ಈ ಮನವಿಯನ್ನು ಪರಿಗಣಿಸಿರುವ ಸಾರಿಗೆ ಸಚಿವರು, ಪತ್ರದಲ್ಲಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಾರಿಗೆ ಇಲಾಖೆಯಿಂದ ಶೀಘ್ರದಲ್ಲೇ ಈ ಕುರಿತು ಅಧಿಕೃತ ಮಾರ್ಗಸೂಚಿ ಅಥವಾ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಸಾರ್ವಜನಿಕ ಬಸ್‌ಗಳಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಪ್ರಯಾಣಿಕರ ಆರೋಗ್ಯ ರಕ್ಷಣೆಗೆ ಇದು ಮಹತ್ವದ ಹೆಜ್ಜೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.


