ಉಡುಪಿ: ಜಿಲ್ಲೆಯ ಮಣಿಪಾಲ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಪರಿಣಾಮ ಏಳು ಶಾಲಾ ಮಕ್ಕಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿಯ ನೆರವಿನಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಣಿಪಾಲದ ಕ್ರಿಸ್ಟ್ ಸ್ಕೂಲ್ಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ ಸಮಯದಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಕೆಲವು ಮಕ್ಕಳು ಅದೃಷ್ಟವಶಾತ್ ಯಾವುದೇ ಅಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಧಾವಿಸಿ ಬಸ್ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ಕಳುಹಿಸಿದರು.
ಘಟನೆ ಕುರಿತು ಮಾಹಿತಿ ಪಡೆದ ಮಣಿಪಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

