ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಿಧಾನ ಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯದ ಜಿಲ್ಲಾ ಘಟಕಗಳಿಗೆ ಸುಮಾರು ₹27.15 ಕೋಟಿ ವೆಚ್ಚದಲ್ಲಿ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು.
ವಿಧಿವಿಜ್ಞಾನ ಪ್ರಯೋಗಾಲಯಗಳ ಕಾರ್ಯನಿರ್ವಹಣೆ, ಅವುಗಳ ವೈಜ್ಞಾನಿಕ ಸಾಮರ್ಥ್ಯ ಹಾಗೂ ನ್ಯಾಯಾಂಗ ವ್ಯವಸ್ಥೆಯಲ್ಲಿ ಅವುಗಳ ಪಾತ್ರ, ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ಸಾಕ್ಷ್ಯಾಧಾರಗಳಿಗೆ ಇಂದು ಹೆಚ್ಚಿನ ಮಹತ್ವ ದೊರೆಯುತ್ತಿದ್ದು, ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಹಾಗೂ ನಿರಪರಾಧಿಗಳಿಗೆ ನ್ಯಾಯ ಒದಗಿಸುವಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳು ಪ್ರಮುಖ ಪಾತ್ರವಹಿಸುತ್ತಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಸೇವೆಗಳನ್ನು ವಿಸ್ತರಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಬಲಪಡಿಸಲಾಗುತ್ತಿದೆ. ಆಧುನಿಕ ಉಪಕರಣಗಳು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಪರಿಣತ ಸಿಬ್ಬಂದಿಯ ನೆರವಿನಿಂದ ತನಿಖೆಯ ಗುಣಮಟ್ಟವನ್ನು ಹೆಚ್ಚಿಸಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ಸಿಬ್ಬಂದಿಗೆ ನಿರಂತರ ತರಬೇತಿ, ಅತ್ಯಾಧುನಿಕ ಉಪಕರಣಗಳ ಬಳಕೆ, ತಾಂತ್ರಿಕ ಸಾಮರ್ಥ್ಯ ವೃದ್ಧಿ ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪೊಲೀಸ್ ಇಲಾಖೆ, ವಿಧಿವಿಜ್ಞಾನ ತಜ್ಞರು ಹಾಗೂ ನ್ಯಾಯಾಂಗ ವ್ಯವಸ್ಥೆಯ ಸಮನ್ವಯದಿಂದ ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸರ್ಕಾರ ಬದ್ಧವಾಗಿದೆ.
ರಾಜ್ಯದ ಎಲ್ಲಾ ವಿಭಾಗಗಳಲ್ಲಿ ವಿಧಿವಿಜ್ಞಾನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಹೊಸ ಮೂಲಸೌಕರ್ಯ, ತಾಂತ್ರಿಕ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಲಿದೆ. ಜನರ ಸುರಕ್ಷತೆ ಮತ್ತು ನ್ಯಾಯದ ಭರವಸೆಯನ್ನು ಬಲಪಡಿಸುವಲ್ಲಿ ವಿಧಿವಿಜ್ಞಾನ ವಿಜ್ಞಾನದ ಪಾತ್ರ ಮಹತ್ತರವಾಗಿದ್ದು, ಈ ಕ್ಷೇತ್ರವನ್ನು ರಾಷ್ಟ್ರೀಯ ಮಟ್ಟದಲ್ಲಿ ಮಾದರಿಯಾಗಿ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಗ್ಯಾರಂಟಿ ಸರ್ಕಾರದ ಕರ್ತವ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಡಿಜಿ ಐಜಿಪಿ ಡಾ.ಎಂ.ಎ. ಸಲೀಂ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವರು ಇದ್ದರು.

