ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಕೂಡಲೇ ಕುಟುಂಬದವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತಡರಾತ್ರಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ಚೆನ್ನಮ್ಮ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ರಾತ್ರಿ 10 ಗಂಟೆ ವೇಳೆಗೆ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ರಾತ್ರಿ ಉಸಿರಾಟ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನಮ್ಮ ಅವರ ಆರೋಗ್ಯ ಪರೀಕ್ಷಿಸಿದ ವೈದ್ಯರು ಮುಂದಿನ ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ. ಮುಂಜಾಗ್ರತೆ ಕ್ರಮವಾಗಿ ವೈದ್ಯರ ಅವರನ್ನು ನಿಗಾದಲ್ಲಿ ಇರಿಸಿದ್ದು, ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

