ನವದೆಹಲಿ: ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಅವರ ಇಚ್ಛೆಯಂತೆ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ವಿಶೇಷ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರಿಸಲು ನ್ಯಾಯಾಲಯ ನಿರ್ದೇಶನ ನೀಡಿದೆ.
ಜಂತರ್ ಮಂತರ್‌ನಲ್ಲಿ ದೀರ್ಘಕಾಲದ ಉಪವಾಸ ಸತ್ಯಾಗ್ರಹದ ಬಳಿಕ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಅವರನ್ನು ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅವರ ಪತ್ನಿ ಗೀತಾಂಜಲಿ ಜೆ. ಅಂಗ್ಮೋ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿತು. ವಿಚಾರಣೆ ವೇಳೆ ನ್ಯಾಯಪೀಠ, “ಅವರನ್ನು ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ನಡೆದಿರುವ ಎಲ್ಲಾ ಪರೀಕ್ಷೆಗಳು, ಚಿಕಿತ್ಸೆ ವಿವರಗಳು ಹಾಗೂ ವೈದ್ಯಕೀಯ ವರದಿಗಳನ್ನು ಮೆಡಾಂಟಾಗೆ ಹಸ್ತಾಂತರಿಸಬೇಕು” ಎಂದು ಸೂಚಿಸಿತು.
ಇದರ ಜೊತೆಗೆ, ವಾಂಗ್ಚುಕ್ ಅವರಿಗೆ ಚಿಕಿತ್ಸೆ ನೀಡಲು ಮೆಡಾಂಟಾ ಆಸ್ಪತ್ರೆ ವಿಶೇಷ ವೈದ್ಯರ ಸಮಿತಿಯನ್ನು ರಚಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿತು. ಈ ಕುರಿತು ವಿವರವಾದ ಆದೇಶವನ್ನು ದಿನದ ನಂತರ ಹೊರಡಿಸುವ ಸಾಧ್ಯತೆ ಇದೆ.
ಇದಕ್ಕೂ ಮೊದಲು, ವಾಂಗ್ಚುಕ್ ಅವರಿಗೆ ಸರ್ಕಾರಿ ಸಫ್ದರ್‌ಜಂಗ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಸಮರ್ಥಿಸಿತ್ತು. ಆದರೆ ಈಗ ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾಂಗ್ಚುಕ್ ಅವರನ್ನು ಮೆಡಾಂಟಾ ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರಕ್ಕೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆದರೆ, ವೈದ್ಯರ ಸಲಹೆಗೆ ವಿರುದ್ಧವಾಗಿ ವಾಂಗ್ಚುಕ್ ಆಸ್ಪತ್ರೆಯಿಂದ ಬಿಡುಗಡೆಯಾಗಬಾರದು ಎಂದು ಅವರು ಮನವಿ ಮಾಡಿದರು. ಆಸ್ಪತ್ರೆಯಿಂದ ಹೊರಬಂದು ಮತ್ತೆ ಪ್ರತಿಭಟನಾ ಸ್ಥಳಕ್ಕೆ ತೆರಳಿದರೆ ಅವರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.”ಅವರಿಗೆ ಬೇಕಾದ ಆಸ್ಪತ್ರೆ ಮತ್ತು ವೈದ್ಯರನ್ನು ಆಯ್ಕೆಮಾಡುವ ಹಕ್ಕಿದೆ. ಆದರೆ ವೈದ್ಯರ ಸಲಹೆಗೆ ವಿರುದ್ಧವಾಗಿ ಆಸ್ಪತ್ರೆಯಿಂದ ಹೊರಬರಬಾರದು. ಅವರು ಮತ್ತೆ ಪ್ರತಿಭಟನಾ ಸ್ಥಳಕ್ಕೆ ಹೋದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು” ಎಂದು ತುಷಾರ್ ಮೆಹ್ತಾ ವಾದಿಸಿದರು.
ವೈದ್ಯಕೀಯ ವರದಿಗಳು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಚರ್ಚಿಸಿದ ಬಳಿಕ, ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಇನ್ನೂ ನಿರಂತರ ವೈದ್ಯಕೀಯ ಮೇಲ್ವಿಚಾರಣೆಯ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೈಕೋರ್ಟ್ ಹೇಳಿತು. ಯಾವುದೇ ಆಸ್ಪತ್ರೆಯಲ್ಲಿ ಈ ಮೇಲ್ವಿಚಾರಣೆ ಸಾಧ್ಯವಾದರೂ, ವೈದ್ಯರಾದ ಡಾ. ಟಂಡನ್ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ನ್ಯಾಯಾಲಯ ಉಲ್ಲೇಖಿಸಿತು.
“ಅವರ ಆಯ್ಕೆಯ ಆಸ್ಪತ್ರೆಯಾದ ಮೆಡಾಂಟಾಗೆ ಸ್ಥಳಾಂತರಿಸಲು ನಾವು ನಿರ್ಧರಿಸಿದ್ದೇವೆ” ಎಂದು ನ್ಯಾಯಪೀಠ ತಿಳಿಸಿತು. ಈ ಹಂತದಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ತಮ್ಮ ವಾದವನ್ನು ಮಂಡಿಸಿದ್ದೇನೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

