ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಶಾಲಾ ವಾಹನದ ಮೇಲೆ ಬೃಹತ್ ಮರ ಬಿದ್ದು ದುರಂತ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಬರಿಮಾರು ಪ್ರದೇಶದ ಕಲ್ಲೆಟ್ಟಿ ದೇವಾಲಯದ ಬಳಿ ಬೃಹತ್ ಗಾತ್ರದ ಮರ ಬುಡಸಹಿತ ಶಾಲಾ ಬಸ್ ಮೇಲೆ ಬಿದ್ದು ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಪೆರ್ನೆ ನಿವಾಸಿ ಚಂದ್ರಶೇಖರ ಅವರ ಪುತ್ರಿ ಚಿರನ್ವಿ(5) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಮತ್ತಿಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಮೇಲೆ ಮರ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಿರನ್ವಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಆನ್ವಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗಿದೆ. ಕ್ಷಿತಿ ಎಂಬ ಬಾಲಕಿಯನ್ನು ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸ್ಕೂಲ್ ಬಸ್ ನಲ್ಲಿ ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದುಯಲಾಗುತ್ತಿತ್ತು. ಏಕಾಏಕಿ ರಸ್ತೆ ಬದಿಯಲ್ಲಿದ್ದ ಮರ ಬುಡ ಸಹಿತ ಬಸ್ ಮೇಲೆ ಬಿದ್ದಿದೆ. ಬಸ್ ನ ಮೇಲ್ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಸ್ಥಳೀಯರು ಬಸ್ ನಲ್ಲಿದ್ದ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮರ ಬಿದ್ದ ಪರಿಣಾಮ ದೇವಾಲಯಕ್ಕೂ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ಪುತ್ತೂರು ತಾಲೂಕು ಆಸ್ಪತ್ರೆಗೆ ಬಂಟ್ವಾಳ ತಹಶೀಲ್ದಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

