ಬೆಂಗಳೂರು: ನಗರದ ಹೊರವಲಯದ ಬೊಮ್ಮಸಂದ್ರದಲ್ಲಿರುವ ಪೇಯಿಂಗ್ ಗೆಸ್ಟ್ (PG) ಕಟ್ಟಡದಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಅಡುಗೆ ಅನಿಲ ಸಿಲಿಂಡರ್ ಸ್ಫೋಟದಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ. ಘಟನೆಯ ಕುರಿತು ಹೆಬ್ಬಗೋಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿರುವ ಪೇಯಿಂಗ್ ಗೆಸ್ಟ್ (PG) ಕಟ್ಟಡದಲ್ಲಿ ಗುರುವಾರ ಬೆಳಗ್ಗೆ ಸುಮಾರು 6 ಗಂಟೆ ವೇಳೆಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಗರಾಜ್ ರೆಡ್ಡಿ ಅವರಿಗೆ ಸೇರಿದ ಈ ಪಿಜಿಯನ್ನು ಲಿಂಗರಾಜು ಎಂಬುವರಿಗೆ ಲೀಸ್ಗೆ ನೀಡಲಾಗಿತ್ತು. 18 ಕೊಠಡಿಗಳಿರುವ ಈ ಕಟ್ಟಡದಲ್ಲಿ ಉತ್ತರ ಭಾರತದ ಕಾರ್ಮಿಕರು ಸೇರಿದಂತೆ ಅನ್ಯರಾಜ್ಯದವರು ವಾಸವಾಗಿದ್ದರು. ಬೆಳಗ್ಗೆ ನಿವಾಸಿಯೊಬ್ಬರು ಲೈಟ್ ಆನ್ ಮಾಡುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದ್ದು, ಭಾರೀ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

