ದೇಶಾದ್ಯಂತ ನೀಟ್ ಪರೀಕ್ಷೆ ಗೊಂದಲ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ, ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಬಾಂಗರ್ ಅವರ ಪುತ್ರಿ ಅನಯಾ ಬಾಂಗರ್ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ದೇಶದಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಈ ಕುರಿತು ಬರೆದುಕೊಂಡಿರುವ ಅನಯಾ, ಕಷ್ಟಪಟ್ಟು ಓದುವ ಪ್ರತಿಯೊಬ್ಬ ವಿದ್ಯಾರ್ಥಿಯ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವಂತಹ ವಾತಾವರಣ ನಿರ್ಮಾಣವಾಗಬೇಕು. ಅರ್ಹತೆ ಮತ್ತು ಸಮರ್ಪಣಾ ಮನೋಭಾವವೇ ನಮ್ಮ ಶಿಕ್ಷಣ ರಂಗದ ಅಡಿಪಾಯವಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಸಮಸ್ಯೆಗಳನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಸ್ಥರು ಶಾಂತಿಯುತವಾಗಿ ಧ್ವನಿ ಎತ್ತಲು ಅವಕಾಶವಿರಬೇಕು. ಪ್ರತಿಯೊಬ್ಬರ ಅಭಿಪ್ರಾಯಕ್ಕೂ ಗೌರವ ಸಿಗಬೇಕು ಎಂದು ಹೇಳಿರುವ ಅವರು, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಲು ಸರ್ಕಾರ ಹಾಗೂ ಅಧಿಕಾರಿಗಳು ತಕ್ಷಣವೇ ಸೂಕ್ತ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳ ಹಕ್ಕು ಮತ್ತು ನ್ಯಾಯಸಮ್ಮತ ಪರೀಕ್ಷಾ ವ್ಯವಸ್ಥೆಗಾಗಿ ದೇಶಾದ್ಯಂತ ವ್ಯಾಪಕ ಹೋರಾಟ ನಡೆಯುತ್ತಿರುವ ಈ ಸಮಯದಲ್ಲಿ, ಅನಯಾ ಅವರ ಈ ಬೆಂಬಲ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.

