ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಸರ್ಕಾರದೊಂದಿಗೆ ನಡೆದ ಮಾತುಕತೆಯ ಬಳಿಕ ಸಿಜೆಪಿ ಪ್ರತಿನಿಧಿಗಳು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತ ಬೇಡಿಕೆಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ನಾಳೆಯವರೆಗೆ ಸಮಯ ಕೇಳಿದೆ ಎಂದು ತಿಳಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯ ಬಳಿಕ, ಸಂವಿಧಾನ ಕ್ಲಬ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ, ಸರ್ಕಾರವು ತಮ್ಮ ಎರಡು ಪ್ರಮುಖ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದರು. ಅವುಗಳಲ್ಲಿ ನೀಟ್ (NEET) ಅಭ್ಯರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಸೇರಿವೆ.
“ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತ ನಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಸರ್ಕಾರ ಶೀಘ್ರದಲ್ಲೇ ಅವರನ್ನು ಶಿಕ್ಷಣ ಸಚಿವ ಸ್ಥಾನದಿಂದ ತೆರವುಗೊಳಿಸುತ್ತದೆ ಎಂಬ ನಿರೀಕ್ಷೆಯಿದೆ,” ಎಂದು ಅಶುತೋಷ್ ರಾಂಕಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾಕ್‌ರೋಚ್ ಜನತಾ ಪಾರ್ಟಿ (CJP) ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆ ಯಾವುದೇ ಕಾರಣಕ್ಕೂ ಹಿಂಪಡೆಯಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ. ಈ ನಡುವೆ, ಪಕ್ಷದ ನಾಯಕರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸಿದರು. ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ನೇತೃತ್ವ ವಹಿಸಿರುವ ಸಿಜೆಪಿ, ತಮ್ಮ ಬೇಡಿಕೆಗೆ ಪ್ರತಿಕ್ರಿಯಿಸಲು ಸರ್ಕಾರವು ಶನಿವಾರ ಮಧ್ಯಾಹ್ನದವರೆಗೆ ಸಮಯ ಕೋರಿದೆ ಎಂದು ಹೇಳಿಕೊಂಡಿದೆ.
ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ ನೇತೃತ್ವದ ಪ್ರತಿಭಟನೆಯ ಪ್ರಮುಖ ಬೇಡಿಕೆಯೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಾಗಿದೆ. ಜುಲೈ 20ರಂದು ವಿದ್ಯಾರ್ಥಿಗಳು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಯತ್ನಿಸಿದ ವೇಳೆ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿತ್ತು. ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಿಜೆಪಿ ಎಚ್ಚರಿಕೆ ನೀಡಿದೆ.

