ನವದೆಹಲಿ: ನೀಟ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದಲೇ ವಜಾಗೊಳಿಸಬೇಕು ಎಂದು ಪಟ್ತು ಹಿಡಿದಿರುವ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ವಿಡಿಯೋ ಮಾಡಿ ಸಲಹೆ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶಕ್ಕೆ ಪ್ರತಿಕ್ರಿಯಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಶಾಂತಿಯುತವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರೆ ಅವರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿಅಗ್ಳ ಮೇಲೆ ಲಾರ್ಠಿಚಾರ್ಜ್ ಮಾಡಲಾಗಿದೆ. ಪೆಲೆಟ್ ಗನ್ ದಾಳಿ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಇಟ್ಟಿರುವ ಮೂರು ಪ್ರಮುಖ ಬೇಡಿಕೆಗಳ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿದ್ಯಾರ್ಥಿಗಳ ಭವಿಷ್ಯ ನಾಶದ ಪ್ರತೀಕ. ಧರ್ಮೇಂದ್ರ ಪ್ರಧಾನ್ ಅವರಿಗೆ ಬೇರೆ ಇಲಾಖೆಯ ಜವಾಬ್ದಾರಿ ಕೊಟ್ಟರೂ ಅದನ್ನು ನಾವು ಸಹಿಸುವುದಿಲ್ಲ, ಅವರು ಸಚಿವ ಸ್ಥಾನದಲ್ಲೇ ಇರಬಾರದು ಎಂದು ಕಿಡಿಕಾರಿದ್ದಾರೆ. ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯನ್ನು ಹತೋಟಿಗೆ ತರಲು ಮೆಟ್ರೋ ರೈಲು ಸೇವೆ ಹಾಗೂ ಇಂಟರ್ನೆಟ್ ಬಂದ್ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ, ಆದರೆ ಪೇಪರ್ ಲೀಕ್ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಸಂದೇಶದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ನಿಮ್ಮ ಸಲಹೆಯಿಂದ ಏನೂ ಆಗುವುದಿಲ್ಲ. ವಿಡಿಯೋ ಮಾಡಿ ಸಲಹೆಗಳನ್ನು ಕೊಡಬೇಡಿ. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದೊಂದೇ ಎಲ್ಲದಕ್ಕೂ ಪರಿಹಾರ ಎಂದು ತಿಳಿಸಿದ್ದಾರೆ.

