ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಗುಡುಗು, ಸಿಡಿಲು ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು ಮತ್ತು ಕರಾವಳಿ ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಲಿದ್ದು, ಒಳನಾಡು ಜಿಲ್ಲೆಗಳಲ್ಲಿ ಜುಲೈ 28 ರಿಂದ ಅಲ್ಲಲ್ಲಿ ಜೋರು ಮಳೆ ಆಗುವ ಸಂಭವವಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಾರಿ ಗಾಳಿ ಸಹಿತ ಮಳೆಯಾಗುವ ಸಂಭವ ಇದ್ದು, ಕರಾವಳಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

