ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರ ನಿರಾಕರಿಸಿದೆ. ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿ ನೀರಿನ ಅಭಾವವನ್ನು ಉಲ್ಲೇಖಿಸಿರುವ ಸರ್ಕಾರ, ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಸಚಿವರ ಕೊಠಡಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ ನಡೆಸಿದ್ದು, ಮೀಟಿಂಗ್ ನಲ್ಲಿ CWRC ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ .
ಸರ್ಕಾರದ ಪ್ರಕಾರ, ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ನಿರೀಕ್ಷಿತ ಪ್ರಮಾಣದ ಮಳೆ ಸುರಿದಿಲ್ಲ. ಪರಿಣಾಮವಾಗಿ ಕೆಆರ್ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಿಗೆ ನೀರಿನ ಒಳಹರಿವು ಕಡಿಮೆಯಾಗಿದ್ದು, ಮೊದಲು ರಾಜ್ಯದ ಕುಡಿಯುವ ನೀರು ಹಾಗೂ ರೈತರ ಬೆಳೆಗಳಿಗೆ ಆದ್ಯತೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇನ್ನೊಂದೆಡೆ, CWRC ಕರ್ನಾಟಕವು ಜುಲೈ 29ರಿಂದ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ನಿರ್ದೇಶನ ನೀಡಿದೆ. ಇದು ಒಟ್ಟು ಸುಮಾರು 4 ಟಿಎಂಸಿ ಅಡಿ ನೀರಿಗೆ ಸಮಾನವಾಗಿದೆ.
ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ ತಕ್ಷಣವೇ CWMA ಮುಂದೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ರಾಜ್ಯದ ವಾಸ್ತವ ನೀರಿನ ಸಂಗ್ರಹ, ಮಳೆಯ ಕೊರತೆ ಹಾಗೂ ರೈತರ ಹಿತಾಸಕ್ತಿಯನ್ನು ಪ್ರಾಧಿಕಾರದ ಗಮನಕ್ಕೆ ತರಲು ನಿರ್ಧರಿಸಿದೆ. ಇದೇ ವೇಳೆ, ಕಾವೇರಿ ನೀರು ಬಿಡುಗಡೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ನಿಲುವಿಗೆ ಬೆಂಬಲ ವ್ಯಕ್ತಪಡಿಸಿವೆ.
ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಅವರು ಮಾತನಾಡಿ, “ಮುಖ್ಯಮಂತ್ರಿಯವರು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಬೆನ್ನಿಗೆ ಚೂರಿ ಹಾಕಿದ್ದಾರೆ. ರೈತರ ಧೈರ್ಯ ಹೆಚ್ಚಿಸಬೇಕಾದ ಮುಖ್ಯಮಂತ್ರಿ, ಅವರ ಮನೋಬಲ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆಗಾಗಿ ಪದೇಪದೇ ದೆಹಲಿಗೆ ಹೋಗುವ ಬದಲು, ವಕೀಲರನ್ನು ಕರೆಸಿ ಈ ವಿಚಾರವಾಗಿ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ಅವರು ಅದನ್ನು ಮಾಡಿಲ್ಲ. ರೈತರ ಪರ ನಿಲ್ಲಬೇಕಾದ ಮುಖ್ಯಮಂತ್ರಿ, ತಮಿಳುನಾಡಿನ ಪರ ನಿಂತಿರುವಂತೆ ಕಾಣುತ್ತಿದೆ,” ಎಂದು ಆರೋಪಿಸಿದರು.

