ಚಿತ್ರದುರ್ಗ: ಪ್ರೀತಿಯ ಸಂಬಂಧದಲ್ಲಿದ್ದ 17 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿ, ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಿಯಕರ ಪರಾರಿಯಾಗಿದ್ದಾನೆ.
ಅಪ್ರಾಪ್ತ ಬಾಲಕಿ ಸರಕು ವಾಹನ ಚಾಲಕ ಕರಿಯಣ್ಣ ಎಂಬಾತನೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದಳು. ಬಾಲಕಿ ವಸತಿ ನಿಲಯದಲ್ಲಿ ವಾಸವಿದ್ದು, ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಗರ್ಭಿಣಿಯಾಗಿರುವುದು ತಿಳಿದ ಬಳಿಕ ಬಾಲಕಿಯ ತಾಯಿ ಆಕೆಯನ್ನು ವಸತಿ ನಿಲಯದಿಂದ ಕರೆತಂದು ಹೆರಿಗೆಗಾಗಿ ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಬಾಲಕಿ ಅಪ್ರಾಪ್ತಳಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬಾಲಕಿಯ ಪ್ರಿಯಕರ ಕರಿಯಣ್ಣ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪ್ರಸ್ತುತ ಅಪ್ರಾಪ್ತ ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

