ಮಂಡ್ಯ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡಬೇಕು ಎಂಬ CWRC ಹಾಗೂ CWMA ಆದೇಶ ಖಂಡಿಸಿ ರೈತರು, ಕನ್ನಡಪರ ಸಂಘಟನೆ ಹಾಗೂ ವಿಪಕ್ಷ ಬಿಜೆಪಿ ನಾಯಕರು ಮಂಡ್ಯ ಭಾಗದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬಿಜೆಪಿ ನಾಯಕರು ಇಂದು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಕೆ.ಆರ್.ಎಸ್ ಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಮತ್ತೊಂದೆಡೆ ಕೆ.ಆರ್.ಎಸ್ ಬೃಂದಾವನ ಗಾಅರ್ಡನ್ ಗೇಟ್ ಬಳಿ ಕನ್ನಡಪರ ಸಂಘಟನೆ ಹಾಗೂ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಗೇಟ್ ಬಳಿ ಪ್ರತಿಭಟನಾಕಾರರು ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರಿ ಬೀದಬಾರದು ಎಂದು ಆಗ್ರಹಿಸಿದ್ದಾರೆ.
ಇಂದು ಬಿಜೆಪಿ ಹಾಗೂ ರೈತರು, ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಪೊಲೀಸ್ ಅಧಿಕಾರಿಗಳು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಆರ್ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಒಟ್ಟು ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್ಪಿ, ಒಂಬತ್ತು ಡಿವೈಎಸ್ಪಿ, ಇಪ್ಪತ್ತೇಳು ಇನ್ಸ್ಪೆಕ್ಟರ್ಗಳು, ನಲವತ್ತೈದು ಪಿಎಸ್ಐ ಮತ್ತು ಎಪ್ಪತ್ತೆಂಟು ಎಎಸ್ಐಗಳನ್ನು ಒಳಗೊಂಡಂತೆ ಭಾರಿ ಸಂಖ್ಯೆಯ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ನೀಡಿದ್ದಾರೆ.
ಕೆ.ಆರ್.ಎಸ್ ಜಲಾಶಯದ ಸುತ್ತಮುತ್ತ ಬ್ಯಾರಿಕೇಡ್ಗಳನ್ನು ಹಾಕಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಕೆಆರ್ಎಸ್ನ ಬೃಂದಾವನ ಉದ್ಯಾನವನಕ್ಕೂ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೃಂದಾವನ ಗಾಅರ್ಡನ್ ಗೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಎಸ್ ಪಿ ಶೋಭಾರಾಣಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚಿನ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

