ಬೆಂಗಳೂರು: ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನ್ನಡಪರ ಸಂಘಟನೆಗಳಿಗೆ ಬಂದ್ ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್‌ನಿಂದ ಯಾವುದೇ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಬದಲಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಹೇಳಿದರು.
ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಕರ್ನಾಟಕದ ಹಿತಾಸಕ್ತಿಯ ವಿಷಯದಲ್ಲಿ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಆದರೆ ಬಂದ್ ನಡೆಸುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಎಲ್ಲರೂ ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳೋಣ” ಎಂದು ಮನವಿ ಮಾಡಿದರು.
ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ ಅವರು, “ಬಂದ್‌ನಿಂದ ವ್ಯಾಪಾರ, ಸಾರಿಗೆ, ಶಿಕ್ಷಣ ಸೇರಿದಂತೆ ಜನಜೀವನಕ್ಕೆ ತೊಂದರೆ ಉಂಟಾಗುತ್ತದೆ. ಸಾಮಾನ್ಯ ಜನರು ಅನಗತ್ಯವಾಗಿ ಸಂಕಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ದಯವಿಟ್ಟು ಕರ್ನಾಟಕ ಬಂದ್‌ನ್ನು ವಾಪಸ್ ಪಡೆಯಿರಿ” ಎಂದು ಕೋರಿದರು. ಹಾಗೂ ತಮಿಳುನಾಡು ಸಿಎಂ ವಿಜಯ್ ಅವರಿಗೆ ಆಗಸ್ಟ್ 3 ರಂದು ಬರುವುದು ಬೇಡ, ಬೇರೆ ದಿನ ಬನ್ನಿ ಎಂದು ಮನವಿ ಮಾಡಿದ್ದೇನೆ ಎಂದರು.
ರಾಜ್ಯದ ಹಿತದೃಷ್ಟಿಯಿಂದ ಎಲ್ಲ ಸಂಘಟನೆಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕಾನೂನುಬದ್ಧ ಹಾಗೂ ಶಾಂತಿಯುತ ಹೋರಾಟದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಭೇಟಿ ಮುಂದೂಡಿಕೆ..?
ಇನ್ನೊಂದೆಡೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಭೇಟಿ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ನೀರು ಹರಿಸುವಂತೆ ಆದೇಶ ನೀಡಿರುವುದು ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಈ ಆದೇಶವನ್ನು ಖಂಡಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹನಿ ನೀರು ಬಿಡಬಾರದು ಎಂದು ಒತ್ತಾಯಿಸುತ್ತಿರುವ ಪ್ರತಿಭಟನಾಕಾರರು, ರಾಜ್ಯದಲ್ಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲಿ ನೀರು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದರ ಜೊತೆಗೆ, ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕರ್ನಾಟಕ ಭೇಟಿ ಸೂಕ್ತವಲ್ಲ ಎಂದು ಹಲವು ಸಂಘಟನೆಗಳು ಅಭಿಪ್ರಾಯಪಟ್ಟಿವೆ. ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ಇರುವ ಕಾರಣ, ಅವರ ಭೇಟಿ ಮುಂದೂಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.ಈ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಮನವಿ ಮಾಡಿದ್ದು, “ಪ್ರಸ್ತುತ ರಾಜ್ಯದಲ್ಲಿ ಸೂಕ್ಷ್ಮ ಪರಿಸ್ಥಿತಿ ಇರುವುದರಿಂದ ಈ ಸಂದರ್ಭದಲ್ಲಿ ಕರ್ನಾಟಕಕ್ಕೆ ಬರುವುದು ಬೇಡ. ಬೇರೆ ದಿನಾಂಕದಲ್ಲಿ ಭೇಟಿ ನೀಡಿದರೆ ಉತ್ತಮ” ಎಂದು ಹೇಳಿದ್ದಾರೆ.

