ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೋರಲಾಗಿದೆ.
ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಎರಡನೇ ಬಾರಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಈ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ಹಿಂದೆಯೇ ಎಸ್ಎಂಎಸ್ ಸಂದೇಶ ಕೂಡ ಕಳುಹಿಸಲಾಗಿದೆ.
ಮುಂಜಾಗ್ರತೆಯ ಸಲುವಾಗಿ ಮತ್ತೊಮ್ಮೆ ಪರಿಶೀಲಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೋರಿದ್ದಾರೆ.
3991 ಹುದ್ದೆಗಳಿಗೆ ನೇಮಕಾತಿ
ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬೃಹತ್ ನೇಮಕಾತಿ ಪರ್ವ ಆರಂಭವಾಗಿದೆ. ಇದರಲ್ಲಿ 3991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಈ ಪೈಕಿ ಉಳಿಕೆ ಮೂಲ ವೃಂದದಲ್ಲಿ 3395 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.00 ರಿಂದ 11.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಇಲ್ಲಿ ಒಟ್ಟು 884 ಪರೀಕ್ಷಾ ಕೇಂದ್ರಗಳಿವೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯನ್ನು ಮಧ್ಯಾಹ್ನ 2.30ರ ಬದಲು ಸಂಜೆ 4 ಗಂಟೆಯಿಂದ 5.30ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ವಿಶೇಷ ಸೂಚನೆ:
ಈ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಮತ್ತು ವಿಶ್ವಾಸಾರ್ಹವಾಗಿ ನಡೆಸಲು ಸರ್ಕಾರ ಅಗತ್ಯವಿರುವ ಎಲ್ಲ ಕಠಿಣ ಕ್ರಮಗಳನ್ನು ಕೈಗೊಂಡಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ. ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಅಂತಹ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸರ್ಕಾರಿ ನೇಮಕಾತಿಗಳಲ್ಲಿ ಭಾಗವಹಿಸಲು ಅವಕಾಶ ನೀಡದಂತೆ ಶಾಶ್ವತವಾಗಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.
ಆಗಸ್ಟ್ 2ರಂದು ನಡೆಯಲಿರುವ ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ. ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ನಮ್ಮ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

