ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ, ಕರ್ನಾಟಕದಾದ್ಯಂತ ನಡೆಯಲಿರುವ 70,000ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ಸಿದ್ಧತೆಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು ಹಾಗೂ ತೆಗೆದುಕೊಂಡ ನಿರ್ಣಯಗಳು ಇಂತಿವೆ:
* ಮುಂಬರುವ ಕೆಪಿಎಸ್‌ಸಿ ಮತ್ತು ಕೆಇಎ ಪರೀಕ್ಷೆಗಳಿಗೆ ಸುಮಾರು 35 ಲಕ್ಷ ಅಭ್ಯರ್ಥಿಗಳು ಹಾಜರಾಗುವ ನಿರೀಕ್ಷೆಯಿದೆ. ಹೀಗಾಗಿ, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಬೇಕು ಮತ್ತು ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಯಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
* ಪರೀಕ್ಷೆಯ ಪ್ರತಿಯೊಂದು ಹಂತವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಖಾಸಗಿ ಕೋಚಿಂಗ್ ಸೆಂಟರ್‌ಗಳ ಮೇಲೆ ತೀವ್ರ ನಿಗಾ ಇಡಲು ಪೊಲೀಸರಿಗೆ ಸೂಚಿಸಲಾಗಿದ್ದು, ಪರೀಕ್ಷಾ ಕರ್ತವ್ಯನಿರತ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ಮೊಬೈಲ್ ಫೋನ್ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
* ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದರಲ್ಲಿ ಯಾವುದೇ ಲೋಪವಾದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು (SP) ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಸಂಪೂರ್ಣ ಪಾರದರ್ಶಕ ಹಾಗೂ ಮೆರಿಟ್ ಆಧಾರಿತ ನೇಮಕಾತಿ ನಡೆಸಲು ನಮ್ಮ ಸರ್ಕಾರ ಬದ್ಧವಾಗಿದೆ.
* ಈ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಲು ಎಸ್. ವಿ. ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದೆ. ಟಿ. ಎಂ. ವಿಜಯಭಾಸ್ಕರ್, ವಂದಿತಾ ಶರ್ಮಾ ಹಾಗೂ ಎಲ್. ಕೆ. ಅತೀಕ್ ಅವರು ಈ ಸಮಿತಿಯ ಸದಸ್ಯರಾಗಿರಲಿದ್ದಾರೆ.
* ಪಾರದರ್ಶಕ ಹಾಗೂ ನಂಬಿಕಾರ್ಹ ನೇಮಕಾತಿ ಪ್ರಕ್ರಿಯೆಯಲ್ಲಿ ಕರ್ನಾಟಕವು ಇಡೀ ದೇಶಕ್ಕೇ ಮಾದರಿಯಾಗಬೇಕು. ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗೂ ನಮ್ಮ ವ್ಯವಸ್ಥೆಯ ಮೇಲೆ ಸಂಪೂರ್ಣ ಭರವಸೆ ಇರಬೇಕು; ಆ ನಂಬಿಕೆಯನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿರಲಿದೆ ಎಂದು ಸಿಎಂ ತಿಳಿಸಿದ್ದಾರೆ.

