ಹಾಸನ : ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಬೆಚ್ಚಿಬೀಳಿಸುವ ಕುಟುಂಬ ದುರಂತ ನಡೆದಿದೆ. ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದಿಂದ ಆಕೆಯನ್ನು ಹತ್ಯೆಗೈದ ಪತಿ, ಬಳಿಕ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ ವಿಷಯ ತಿಳಿಸಿ, ತಾನೂ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.
ಪತ್ನಿಯ ಮೇಲೆ ಅನೈತಿಕ ಸಂಬಂಧದ ಅನುಮಾನ ಹೊಂದಿದ್ದ ಪತಿ, ಆಕೆಯನ್ನು ಹತ್ಯೆಗೈದು ಬಳಿಕ ಸಂಬಂಧಿಕರಿಗೆ ವಿಡಿಯೋ ಕಾಲ್ ಮೂಲಕ ವಿಷಯ ತಿಳಿಸಿ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ದುರಂತದಲ್ಲಿ ಇಬ್ಬರು ಚಿಕ್ಕ ಮಕ್ಕಳ ಬದುಕು ಅತಂತ್ರವಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತ ಮಹಿಳೆಯನ್ನು ಗಗನ (38) ಹಾಗೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಘು (41) ಎಂದು ಗುರುತಿಸಲಾಗಿದೆ. 13 ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಗೆ 12 ಮತ್ತು 6 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಬೇಕರಿ ನಡೆಸುತ್ತಿದ್ದ ದಂಪತಿ ಶುಕ್ರವಾರ ಕಾರಿನಲ್ಲಿ ಕೆಸಗೋಡು ಗ್ರಾಮಕ್ಕೆ ಬಂದಿದ್ದರು.
ಗ್ರಾಮಕ್ಕೆ ಬಂದ ಬಳಿಕ ರಘು ತನ್ನ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ, ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ಕಾರಿನಲ್ಲೇ ಗಗನಳನ್ನು ಹತ್ಯೆಗೈದು, ಬಳಿಕ ಶವವನ್ನು ಯಗಚಿ ನಾಲೆ ಬಳಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಂತರ ರಸ್ತೆ ಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಪೊಲೀಸರು ಗಗನಳ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದು, ಘಟನೆಗೆ ನಿಖರ ಕಾರಣ ಹಾಗೂ ಎಲ್ಲಾ ಆಯಾಮಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

