ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ಮುಂದಿನ 7 ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವೆಡೆ ನಿರಂತರ ಗಾಳಿ ಸಹಿತ ಸಾಧಾರಣ ಮಳೆ ಆಗುವ ಸಂಭವವಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಧ್ಯಮ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗ ಸೇರಿ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದೆ.
ಆಗಸ್ಟ್ 3ರಂದು ಬೀದರ್, ಬಾಗಲಕೋಟೆ, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿ ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಆಗಸ್ಟ್ 4ರಿಂದ 8ರವರೆಗೆ ಸಾಧಾರಣ ಮಳೆಯಾಗುವ ಸಂಭವ ಇದೆ. ಕಲಬುರಗಿ, ಗದಗ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಉತ್ತಮ ಮಳೆ ಆಗಲಿದೆ. ಆಗಸ್ಟ್ 3ರಿಂದ 8ರವರೆಗೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

