HomeLatest Newsಬೆಂಗಳೂರು: ಫುಟ್‌ಪಾತ್‌ಗಳಲ್ಲಿ ಕೆಟ್ಟು ನಿಂತ ವಾಹನಗಳಿಗೂ ಮುಹೂರ್ತ ಇಟ್ಟ ಕೃಷ್ಣಬೈರೇಗೌಡ

ಬೆಂಗಳೂರು: ಫುಟ್‌ಪಾತ್‌ಗಳಲ್ಲಿ ಕೆಟ್ಟು ನಿಂತ ವಾಹನಗಳಿಗೂ ಮುಹೂರ್ತ ಇಟ್ಟ ಕೃಷ್ಣಬೈರೇಗೌಡ

ಬೆಂಗಳೂರು-ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿರುವ ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಮಗ್ರ ಆಕ್ಷನ್ ಪ್ಲಾನ್ ರೂಪಿಸಿ, ಪಾಲಿಕೆವಾರು ಕಾರ್ಯಾಚರಣೆ ವೇಳಾಪಟ್ಟಿಯನ್ನು ಸಿದ್ಧಪಡಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದಲ್ಲಿ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂದು ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಮತ್ತಷ್ಟು ವೇಗಗೊಳಿಸಲು ನಗರ ಪಾಲಿಕೆ ಅಧಿಕಾರಿಗಳು ಸಮಗ್ರ ಕಾರ್ಯಯೋಜನೆ ರೂಪಿಸಿ, ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಬಿಡಾಡಿ ವಾಹನಗಳ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಕೆಳಹಂತದ ಅಧಿಕಾರಿಗಳ ಕಾರ್ಯಕ್ಷಮತೆಯ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು. ಕಾರ್ಯಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್-ಪಾಲಿಕೆ ಸಮನ್ವಯ ಹಾಗೂ ಹರಾಜು ಪ್ರಕ್ರಿಯೆ

ಬಿಡಾಡಿ ವಾಹನಗಳ ತೆರವು ಕಾರ್ಯದಲ್ಲಿ ಪೊಲೀಸ್ ಹಾಗೂ ನಗರ ಪಾಲಿಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈವರೆಗೆ ಗುರುತಿಸಿರುವ, ದಂಡ ಪಾವತಿಸಿ ಬಿಡುಗಡೆ ಮಾಡಿರುವ ಹಾಗೂ ಟೋಯಿಂಗ್ ಮಾಡಿರುವ ವಾಹನಗಳ ಕುರಿತು ನಿಖರ ಮಾಹಿತಿಯನ್ನು ಸಲ್ಲಿಸಬೇಕು. ನೋಟಿಸ್ ಅಂಟಿಸಿ ಟೋಯಿಂಗ್ ಮಾಡಿದ ನಂತರ 15 ದಿನಗಳು ಕಳೆದಿರುವ ಬಿಡಾಡಿ ವಾಹನಗಳನ್ನು ಹರಾಜು ಮಾಡುವ ಸಲುವಾಗಿ ಪತ್ರಿಕಾ ಪ್ರಕಟಣೆ ನೀಡುವಂತೆ ನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಪೊಲೀಸ್ ಸಿಬ್ಬಂದಿ ನಿಯೋಜನೆಗೆ ಸೂಚನೆ:

ಬಿಡಾಡಿ ವಾಹನಗಳ ತೆರವು ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಪ್ರತಿ ಸಂಚಾರಿ ಪೊಲೀಸ್ ಠಾಣೆಗೆ ಈ ಕಾರ್ಯಕ್ಕಾಗಿ ಪ್ರತ್ಯೇಕವಾಗಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಲ್ಲದೆ, ಪೊಲೀಸ್ ಇಲಾಖೆ ಗುರುತಿಸಿರುವ ಬಿಡಾಡಿ ವಾಹನಗಳಿಗೆ ನೋಟಿಸ್ ಅಂಟಿಸುವ ಕಾರ್ಯದಲ್ಲಿ ವಾರ್ಡ್ ಅಧಿಕಾರಿಗಳೊಂದಿಗೆ ಮಾರ್ಷಲ್‌ಗಳನ್ನು ಸಹ ನಿಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮರು ಅತಿಕ್ರಮಣ ಮಾಡುವವರಿಗೆ ದಂಡ ವಿಧಿಸಿ:

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ

ನಗರದಲ್ಲಿ ಇದುವರೆಗೆ 773 ಕಿ.ಮೀ. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಬೇಕು. ತೆರವುಗೊಳಿಸಿದ ನಂತರ ಮರು ಅತಿಕ್ರಮಣ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದರ ಜೊತೆಗೆ, ನಿಯಮಾನುಸಾರ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ತೆರವುಗೊಳಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅಗತ್ಯಕ್ಕಿಂತ ಹೆಚ್ಚು ಅಗಲವಿರುವ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಂದರೀಕರಣ ಹಾಗೂ ನಾಗರಿಕ ಸ್ನೇಹಿ ಮೂಲಸೌಕರ್ಯ ಅಭಿವೃದ್ಧಿಗೆ ಅವಕಾಶ ಕಲ್ಪಿಸುವ ಕುರಿತು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.

ಪಾದಚಾರಿ ಮಾರ್ಗಗಳ ದುರಸ್ತಿಗೆ ಆದ್ಯತೆ:

ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯದ ಜೊತೆಗೆ ದುರಸ್ತಿ ಕಾಮಗಾರಿಯನ್ನೂ ಸಮಾನಾಂತರವಾಗಿ ಕೈಗೊಳ್ಳಬೇಕು. ಈಗಾಗಲೇ ಹಲವು ಕಡೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೂ ಕೆಲವು ಕಡೆ ಅಂತಿಮ ಹಂತದಲ್ಲಿದೆ. ಬಾಕಿ ಇರುವ ಟೆಂಡರ್ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ, ಪಾದಚಾರಿ ಮಾರ್ಗಗಳ ದುರಸ್ತಿ ಕಾಮಗಾರಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಮನ್ವಯದಿಂದ ಕಾರ್ಯನಿರ್ವಹಿಸಿ:

ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮತ್ತು ಬಿಡಾಡಿ ವಾಹನಗಳಿಂದ ಮುಕ್ತಗೊಳಿಸುವ ಕಾರ್ಯದಲ್ಲಿ ಸಂಬಂಧಿತ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ನಾಗರಿಕರಿಗೆ ಸುರಕ್ಷಿತ, ಸ್ವಚ್ಛ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಎಲ್ಲಾ ಇಲಾಖೆಗಳ ಆದ್ಯತೆಯಾಗಿರಬೇಕು ಎಂದು ಸಚಿವರು ತಿಳಿಸಿದರು.

ಬಿಡಾಡಿ ವಾಹನಗಳ ತೆರವು: ಇದುವರೆಗಿನ ಪ್ರಗತಿ

ಬೆಂಗಳೂರು ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ, ನಗರದಲ್ಲಿ ಪೊಲೀಸ್ ಇಲಾಖೆಯಿಂದ 2,533 ಹಾಗೂ ನಾಗರಿಕರಿಂದ 4,043 ಸೇರಿ ಒಟ್ಟು 6,576 ಬಿಡಾಡಿ ವಾಹನಗಳನ್ನು ಗುರುತಿಸಲಾಗಿದೆ. ಈ ಪೈಕಿ 1,605 ವಾಹನಗಳಿಗೆ ನೋಟಿಸ್ ಅಂಟಿಸಲಾಗಿದ್ದು, 263 ವಾಹನಗಳನ್ನು ಟೋಯಿಂಗ್ ಮಾಡಲಾಗಿದೆ. ನೋಟಿಸ್ ಅಂಟಿಸಿದ ಹಾಗೂ ಟೋಯಿಂಗ್ ಮಾಡಿದ ವಾಹನಗಳ ಮಾಲೀಕರು ₹2.16 ಲಕ್ಷ ದಂಡ ಪಾವತಿಸಿ ತಮ್ಮ ವಾಹನಗಳನ್ನು ಬಿಡುಗಡೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ. ಹಾಗೂ ಜಿ. ಜಗದೀಶ್, ಅಪರ ಆಯುಕ್ತರು, ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ವಿದ್ಯುತ್ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular