ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲೂಕಿನ ಕಡೇಚೂರ್ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಕೆಮಿಕಲ್ ಸೋರಿಕೆಯಿಂದ ಭೀಕರ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ಕಾರ್ಖಾನೆಯಲ್ಲಿ ಏಕಾಏಕಿ ಕೆಮಿಕಲ್ ಸೋರಿಕೆಯಾಗಿದ್ದು, ವಿಷಕಾರಿ ಅನಿಲ ಅಥವಾ ರಾಸಾಯನಿಕ ಉಸಿರಾಟದ ಮೂಲಕ ದೇಹಕ್ಕೆ ಸೇರಿದ ಪರಿಣಾಮ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಘಟನೆಯಲ್ಲಿ ವಿಕ್ರಂಸಿಂಗ್ (30), ಸಂಜಯ್ ಸಿಂಗ್ (29) ಹಾಗೂ ಗಣೇಶ್ (25) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಸ್ವಸ್ಥಗೊಂಡಿರುವ ಶಿವಕುಮಾರ್ ಮತ್ತು ಹೇಮಂತ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆಮಿಕಲ್ ಸೋರಿಕೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳ ಪಾಲನೆ ನಡೆದಿತ್ತೇ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

