ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮತ್ತೊಂದೆಡೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಹಲವು ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಜಿಲ್ಲೆ ಜಿಲ್ಲೆಗಳಲ್ಲಿ ಶಾಸಕರ ಬೆಂಬಲಿಗರು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆಳವಣಿಗೆ ನಡುವೆ ಬಿಜೆಪಿ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿರುವ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಹರಾಜು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಆಡೀಯೋ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ನಂಜಯ್ಯ ಮಠ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಸೇಲ್ ಆಗಿದೆ ಎಂದು ಆರೋಪಿಸಿದ್ದಾರೆ.
ಮಂತ್ರಿ ಸ್ಥಾನಗಳನ್ನು ಹರಾಜಿಗೆ ಇಡಲಾಗಿದೆ. ಕೆಲ ಆಡೀಯೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಚಿವ ಸ್ಥಾನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಅನುಮಾನ ಮೂಡಿದೆ ಎಂದರು.
ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ದುರ್ಬಳಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲಾಗಿದೆ. ಇದು ಕಾಂಗ್ರೆಸ್ ನ ಭ್ರಷ್ಟ ನಿಲುವಿಗೆ ಸಾಕ್ಷಿಯಾಗಿದೆ. ಜಾಮೀನಿನನ ಮೇಲೆ ಹೊರಗಿರುವ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡಿರುವುದು ಸರಿಯಲ್ಲ. ಅವರು ರಾಜೀನಾಮೆ ನೀಡುವವರೆಗೂ ಆ.13ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನ ಸುಗಮವಾಗಿ ನಡೆಯಲು ಬಿಡುವುದಿಲ್ಲ ಎಂದು ಹೇಳಿದರು.

