ನವದೆಹಲಿ,-ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲಿವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು.
ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರತಿ ಅಧಿವೇಶನದ ಮುನ್ನ ಉಭಯ ಪಕ್ಷಗಳು ಸರ್ಕಾರದ ವೈಫಲ್ಯಗಳ ಕುರಿತು ಚರ್ಚಿಸಿ ಕಾರ್ಯತಂತ್ರ ರೂಪಿಸುತ್ತವೆ. ಈ ಬಾರಿಯೂ ಅದೇ ರೀತಿಯಾಗಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಸರ್ಕಾರದ ವಿರುದ್ಧ ಸದನದ ಒಳಗೂ ಹೊರಗೂ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ತೀವ್ರ ಆಕ್ಷೇಪ
ಬಿಡದಿ ಟೌನ್ಶಿಪ್ ಯೋಜನೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಇದೊಂದು ದೊಡ್ಡ ಭೂ ಹಗರಣವಾಗಿದ್ದು, ರಿಯಲ್ ಎಸ್ಟೇಟ್ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು. ರೈತರ ಭೂಮಿ ಹಾಗೂ ಹಳ್ಳಿಗಳನ್ನು ವಶಪಡಿಸಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಈ ಯೋಜನೆಯ ವಿರುದ್ಧ ಸದನದ ಒಳಗೂ ಹೊರಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಅಂತಿಮ ರೂಪ ನೀಡುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಕುಮಾರಸ್ವಾಮಿ ಅವರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದು ಅಶೋಕ್ ತಿಳಿಸಿದರು. ಶನಿವಾರ ಕುಮಾರಸ್ವಾಮಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿ ಜಂಟಿ ಹೋರಾಟದ ಅಧಿಕೃತ ರೂಪುರೇಷೆ ಪ್ರಕಟಿಸಲಿದ್ದಾರೆ ಎಂದರು.
ಸಮನ್ವಯ ಸಮಿತಿ ರಚನೆ ಕುರಿತು ಮಹತ್ವದ ನಿರ್ಧಾರ
ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ 12 ಪ್ರಮುಖ ಬಿಜೆಪಿ ನಾಯಕರ ಸಭೆ ನಡೆಯಲಿದ್ದು, ಬಿಜೆಪಿ–ಜೆಡಿಎಸ್ ನಡುವೆ ಸಮನ್ವಯ ಸಮಿತಿ ರಚನೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. ಅಧಿವೇಶನದ ವೇಳೆ ಸದನದ ಒಳಗೆ ಈಗಾಗಲೇ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸುತ್ತಿದ್ದು, ಹೊರಗಡೆ ಪಾದಯಾತ್ರೆ ನಡೆಸುವ ಕುರಿತು ಶನಿವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಆರೋಪ
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೂ ಸರ್ಕಾರದಲ್ಲಿನ ಭ್ರಷ್ಟಾಚಾರ ಮತ್ತು ಲಂಚದ ವ್ಯವಸ್ಥೆ ನಿಲ್ಲುವುದಿಲ್ಲ ಎಂದು ಆರೋಪಿಸಿದರು. ಹೈಕಮಾಂಡ್ಗೆ ಹಣ ನೀಡಿದವರಿಗೆ ಮಾತ್ರ ಸಚಿವ ಸ್ಥಾನ ದೊರೆತಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ನಾಯಕರೇ ಬಹಿರಂಗವಾಗಿ ಹೇಳುತ್ತಿದ್ದಾರೆ ಎಂದು ದೂರಿದರು.
ದೆಹಲಿ ನಾಯಕರಿಗೆ ಹಣ ನೀಡದ ಕಾರಣ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಆರೋಪಗಳನ್ನು ಕಾಂಗ್ರೆಸ್ ಶಾಸಕರೇ ಮಾಡುತ್ತಿದ್ದಾರೆ. ಮಾಜಿ ಸಚಿವ ಎಂ.ಸಿ. ಸುಧಾಕರ್ ಸೇರಿದಂತೆ ಹಲವು ನಾಯಕರು ಹಣ ಕೊಟ್ಟವರಿಗೆ ಸಚಿವ ಸ್ಥಾನ ಸಿಕ್ಕಿದೆ ಹಾಗೂ ಸಿದ್ದರಾಮಯ್ಯ ಬೆಂಬಲಿಗರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರಿಗಳ ಹಾಗೂ ಹಣ ನೀಡಿ ಹುದ್ದೆ ಪಡೆದ ಸಚಿವರ ಸಂಪುಟವಾಗಿದೆ ಎಂದು ಅಶೋಕ್ ಟೀಕಿಸಿದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಅವರದೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಈ ನಡವಳಿಕೆ ವಿರುದ್ಧ ವಿಧಾನಮಂಡಲ ಅಧಿವೇಶನ ಸುಗಮವಾಗಿ ನಡೆಯದಂತೆ ಬೃಹತ್ ಪ್ರತಿಭಟನೆ ರೂಪಿಸಲಾಗುವುದು ಎಂದು ಆರ್. ಅಶೋಕ್ ಹೇಳಿದರು.

